ಯಾದಗಿರಿ: ನಾಡಿನ ರೈತರಿಗೆ ಕೇಂದ್ರ ಸರ್ಕಾರದ ಕೊಡುಗೆ ಸಂಪೂರ್ಣವಾಗಿ ಶೂನ್ಯವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಆರೋಪಿಸಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಈಗಾಗಲೇ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯ ಸರ್ಕಾರ ರೈತರ ಹಿತ ಕಾಯಲು ಮುಂದಾಗಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತಿನಲ್ಲಿ ರೈತರ ಪರವಾಗಿ ಕೇಂದ್ರ ಸರ್ಕಾರ ಇದೆ ಎಂದು ಹೇಳುತ್ತಿದ್ದಾರೆ. ಆದರೆ ರೈತರ ಪರವಾಗಿ ಯಾವುದೇ ಸ್ಪಷ್ಟ ಕೊಡುಗೆ ನೀಡಿಲ್ಲ ಎಂದು ಅವರು ಟೀಕಿಸಿದರು. ರೈತರನ್ನು ದಾರಿ ತಪ್ಪಿಸುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದೂ ಆರೋಪಿಸಿದರು.

ಬರಗಾಲದ ಪರಿಣಾಮ ರೈತರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವುದು ಕೇಂದ್ರ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಕೇಂದ್ರ ಸರ್ಕಾರ ತನ್ನ ಪಾಲಿನ ಬರ ಪರಿಹಾರವನ್ನು ಈಗಾಗಲೇ ಘೋಷಿಸಬೇಕಾಗಿತ್ತು. ಆದರೆ ಈ ವಿಷಯದಲ್ಲಿಯೂ ರಾಜಕೀಯ ಮಾಡುತ್ತಿದೆ ಎಂದು ದೂರಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಪದೇಪದೇ ಅನ್ಯಾಯ ಮಾಡುತ್ತಿದೆ. ಆದರೆ ಬಿಜೆಪಿ ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ರೈತರ ಪರವಾಗಿ ನಿಲ್ಲದಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದರು.

ರಾಜ್ಯದ ಕುರಿತು ಕೇಂದ್ರ ಸರ್ಕಾರ ಇದೇ ರೀತಿಯ ಧೋರಣೆ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ರೈತರು ಮತ್ತು ಸಾರ್ವಜನಿಕರು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾದ ಪರಿಸ್ಥಿತಿ ಉಂಟಾಗಬಹುದು ಎಂದು ಡಾ. ಭೀಮಣ್ಣ ಮೇಟಿ ಎಚ್ಚರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor