Yadagiri | ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಭೇಟಿ
ಯಾದಗಿರಿ: ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿ, ಕ್ರೀಡಾಪಟು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕ್ರೀಡಾ ತರಬೇತಿ, ವಸತಿ, ಆಹಾರ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಈ ವೇಳೆ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ರೀಡಾಪಟು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ಅವರು, ಕಠಿಣ ಪರಿಶ್ರಮ, ಶಿಸ್ತು ಹಾಗೂ ನಿರಂತರ ಅಭ್ಯಾಸದ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ, ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.