ಯಾದಗಿರಿ | ಕಾಲಮಿತಿಯಲ್ಲಿ ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ವ್ಯಕ್ತಿಗತ ಸೌಲಭ್ಯ ಕಲ್ಪಿಸಿ ; ಡಾ.ಸುಶೀಲಾ ಬಿ
ಯಾದಗಿರಿ : ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಆಯಾ ಇಲಾಖೆಗೆ ಪ್ರಸಕ್ತ 2024-25ನೇ ಸಾಲಿಗೆ ಹಂಚಿಕೆಯಾದ ಅನುದಾನವನ್ನು ಕಾಲಮಿತಿಯಲ್ಲಿ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸುವ ಮೂಲಕ ವ್ಯಕ್ತಿಗತ ಸೌಲಭ್ಯವನ್ನು ಸಮುದಾಯದ ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಹೇಳಿದರು.
ಸೋಮವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಎಸ್‌ಸಿಎಸ್‌ಪಿ-ಟಿಎಸ್‌ಪಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಇಲಾಖೆ ಮೂಲಕ ಬೀಜಗಳ ಪೂರೈಕೆ ಕಾರ್ಯಕ್ರಮ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಸಾವಯವ ಇಂಗಾಲ ಹೆಚ್ಚಿಸುವಿಕೆ ಅಭಿಯಾನ, ಕೃಷಿ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಅಂತಿಮಗೊಳಿಸಿ ಸೌಲಭ್ಯ ನೀಡಬೇಕು ಎಂದರು.
ರೈತ ಸಮುದಾಯ ಕೇಂದ್ರಿತ ಇಲಾಖೆಗಳಾದ ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಸರಕಾರ ರೂಪಿಸಿರುವ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದ ಅವರು, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಕೂಲಂಕುಷವಾಗಿ ಕೈಗೊಂಡರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ರಾಜು ದೇಶಮುಖ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.