×
Ad

ಯಾದಗಿರಿ | ಮಕ್ಕಳ ಹಕ್ಕುಗಳ ರಕ್ಷಣೆ, ಗುಣಮಟ್ಟದ ಶಿಕ್ಷಣಕ್ಕೆ ವಿಶೇಷ ಗಮನ ನೀಡಿ : ಶಶಿಧರ್ ಕೋಸಂಬೆ

Update: 2025-01-29 18:34 IST

ಯಾದಗಿರಿ : ಮಕ್ಕಳ ಸಮಸ್ಯೆಗಳಿಗೆ ಚುರುಕಾಗಿ, ರಚನಾತ್ಮಕವಾಗಿ ಹಾಗೂ ಸಕಾಲಕ್ಕೆ ಸ್ಪಂದಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಕ್ಷರದಲ್ಲಿ ʼಶಾಲೆಯ ಜೊತೆಗೆ ಶಿಕ್ಷಣದಲ್ಲಿದೆ ಮಕ್ಕಳ ರಕ್ಷಣೆʼ ಎಂಬ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಅನುಭವಿಸುತ್ತಿರುವ ಸಂಕಷ್ಟಗಳನ್ನು ಅವರಿಂದಲೇ ನೇರವಾಗಿ ಪಡೆದು, ಅವುಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಇಂತಹ ವಿಶೇಷ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀದರ್, ಚಾಮರಾಜನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳ ಮೇಲಾಗುವ ದೌರ್ಜನ್ಯ, ಶೋಷಣೆ, ಬಾಲ್ಯ ವಿವಾಹ, ಕಳ್ಳಸಾಗಾಣಿಕೆ, ಅತ್ಯಾಚಾರ ಮತ್ತು ಇನ್ನಿತರ ಕೌಟುಂಬಿಕ ಶೋಷಣೆ ಗಳಂತಹ ಸಮಸ್ಯೆಗಳ ಬಗ್ಗೆ ಮಕ್ಕಳಿಂದಲೇ ನೇರವಾಗಿ ಸಮಸ್ಯೆಗಳನ್ನು ಪಡೆದು ಪರಿಹರಿಸಲು ಸಂವಾದ ಹಮ್ಮಿಕೊಂಡಿದೆ.

ಮಕ್ಕಳು ಅನುಭವಿಸುವಂತಹ ಕಷ್ಟಗಳಿಗೆ ಅಧಿಕಾರಿಗಳು ಸಕಾಲಕ್ಕೆ ಪರಿಹಾರ ದೊರಕಿಸಬೇಕು. ಸಕಾಲಕ್ಕೆ ಪರಿಹಾರ ದೊರೆಯದಿದ್ದ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೂಲಕ ನ್ಯಾಯ ಒದಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಉಚಿತ ಕಡ್ಡಾಯ ಶಿಕ್ಷಣ ಕಾಯ್ದೆ 2009 ಸಮರ್ಪಕ ಜಾರಿ, ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ ಮುಖ್ಯವಾಗಿದ್ದು, ಅಧಿಕಾರಿಗಳ ಪಾತ್ರ ಅಪಾರವಾಗಿದೆ. ಈ ದಿಸೆಯಲ್ಲ ಮಕ್ಕಳ ಸಮಸ್ಯೆಗಳನ್ನು ಆದ್ಯತೆ ಮೇಲೆ ಅಧಿಕಾರಿಗಳು ಪರಿಹರಿಸಬೇಕು ಎಂದು ಸೂಚನೆ ನೀಡಿದರು.

ಮಕ್ಕಳೊಂದಿಗೆ ಸಂವಾದ :

ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳೊಂದಿಗೆ ವಿವಿಧ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಕೋಸಂಬೆ ಅವರು ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳಿಂದ ವಿಜ್ಞಾನ, ಕಂಪ್ಯೂಟರ್ ಹಾಗೂ ಪಿಟಿ ಶಿಕ್ಷಕರ ಬೇಡಿಕೆ ಬಂದಿರುವುದರಿಂದ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚನ್ನಬಸಪ್ಪ ಮುಧೋಳ ಅವರು ಸೂಕ್ತ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಕ್ಕಳು ಭಯದ ವಾತಾವರಣದಲ್ಲಿ ಶಿಕ್ಷಣ ಪಡೆಯಬಾರದು. ಈ ಹಿನ್ನೆಲೆಯಲ್ಲಿ ಶಿಕ್ಷಣದ ಗುಣಮಟ್ಟ, ಶಾಲಾ ಪರಿಸರ ಅನುಕೂಲಕರವಾಗುವ ರೀತಿಯಲ್ಲಿ ಸಿದ್ಧಗೊಳಿಸಬೇಕು. ಯಾವುದೇ ಅಧಿಕಾರಿಗಳು ನಿರ್ಲಕ್ಷ್ಯ ತೋರುವ ಕ್ರಮವನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗಂಭೀರವಾಗಿ ಪರಿಗಣಿಸಲಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶುದ್ಧ ಕುಡಿಯುವ ನೀರು ಪೂರೈಕೆ, ಶೌಚಾಲಯ ವ್ಯವಸ್ಥೆ ಕಾಂಪೌಂಡ್, ಆಟದ ಮೈದಾನ, ಕ್ರೀಡಾ ಸಾಮಗ್ರಿಗಳ, ಗುಣಮಟ್ಟದ ಬಿಸಿ ಊಟ ಪೂರೈಕೆ ಮತ್ತು ಸುರಕ್ಷತೆ ಬಗ್ಗೆ ಗಮನಕ್ಕೆ ತಂದಿದ್ದು, ಸಂಬಂಧ ಪಟ್ಟ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯ ,ವಿವಿಧ ಶಾಲೆಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ನಿರಂತರ ಪೊಲೀಸ್ ಬೀಟ್ ಹೆಚ್ಚಿಸುವಂತೆ ಸೂಚನೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರೆಯಪ್ಪ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ರಕ್ಷಣೆ ಅತಿ ಮುಖ್ಯವಾಗಿದ್ದು, ಶಿಕ್ಷಕರ, ಪಾಲಕರ, ಸಮಾಜದ ಹೊಣೆಯಾಗಿದೆ. ವಿವಿಧ ಶಾಲೆಗಳಲ್ಲಿ ಮೂಲ ಸೌಕರ್ಯ ಇಲ್ಲದ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನೈಜ ವರದಿ ಸಲ್ಲಿಸಬೇಕು. ಶಾಲೆಯ ವಾತಾವರಣ ಉತ್ತಮವಾಗಿರಬೇಕು. ಮಕ್ಕಳಿಗೆ ರಕ್ಷಣಾ ಹಕ್ಕು ದೊರೆಯುವ ಜೊತೆಗೆ ಅವರ ಭವಿಷ್ಯ ಉತ್ತಮಗೊಳ್ಳಬೇಕು. ಕನಿಷ್ಠಮೂಲಸೌಕರ್ಯಗಳನ್ನು ಒದಗಿಸಿ ಹಾಜರಾತಿ ಪ್ರಮಾಣವನ್ನು ಹೆಚ್ಚಿಸುವಂತೆ ಸಲಹೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚನ್ನಬಸಪ್ಪ ಮುಧೋಳ ಅವರು ಇಲಾಖೆ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಬಗ್ಗೆ ವಿವರಿಸಿದರು. ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟ ಪೂರ್ವ ಸದಸ್ಯರಾದ ಹೆಚ್.ಸಿ.ರಾಘವೇಂದ್ರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಡಿವೈಎಸ್ಪಿ ಅರುಣಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಮಕ್ಕಳ ರಕ್ಷಣಾಧಿಕಾರಿಗಳಾದ ಪ್ರೇಮಮೂರ್ತಿ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News