ಯಾದಗಿರಿ | ಮನೆ ಹಂಚಿಕೆಯಲ್ಲಿ ಅಕ್ರಮ ಆರೋಪ : ಗುರುಸಣಗಿ ಕ್ರಾಸ್ ಬಳಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ
ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಡಿ ಮನೆ ಹಂಚಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿಯು ತಾಲ್ಲೂಕಿನ ಗುರುಸಣಗಿ ಕ್ರಾಸ್ ಬಳಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿತು.
ಟಿ.ವಡಿಗೇರಿ ಗ್ರಾಮ ಪಂಚಾಯಿತಿಯಲ್ಲಿ ಅರ್ಹ ಫಲಾನುಭವಿಗಳನ್ನು ಕಡೆಗಣಿಸಿ, ಯೋಗ್ಯವಲ್ಲದವರಿಗೆ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಕುರಿತು ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ಗಂಭೀರ ಆರೋಪ ಮಾಡಿದರು.
ಈ ವೇಳೆ ಮಾತನಾಡಿದ ಮುಖಂಡರು, ಈ ಅವ್ಯವಹಾರದ ಕುರಿತು ಕಳೆದ ಸೆ.18ರಂದು ತಾಲ್ಲೂಕು ಪಂಚಾಯತ್ ಎದುರು ಪ್ರತಿಭಟನೆ ನಡೆಸಲಾಗಿತ್ತು ಹಾಗೂ ಸೆ.22ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಆದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಅನಿವಾರ್ಯವಾಗಿ ನ್ಯಾಯಕ್ಕಾಗಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಅಧಿಕಾರಿಗಳ ಕಣ್ಣೆದುರೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳದಂತೆ ತಡೆಯುತ್ತಿರುವ 'ಅದೃಶ್ಯ ಕೈ'ಗಳು ಯಾವುವು ಎಂದು ಪ್ರಶ್ನಿಸಿದ ಹೋರಾಟಗಾರರು, ನಿಜವಾದ ಬಡವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.
ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಚರಂಡಿಗಳು ತುಂಬಿ ಗಬ್ಬು ನಾರುತ್ತಿದ್ದು, ಸೊಳ್ಳೆಗಳ ಕಾಟದಿಂದ ಜನ-ಜಾನುವಾರುಗಳು ರೋಗಗಳಿಗೆ ತುತ್ತಾಗುತ್ತಿವೆ. ಕೂಡಲೇ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮನೆ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಕಾರಣರಾದ ಪಿಡಿಒ (PDO) ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ವಜಾಗೊಳಿಸಬೇಕು. ಅರ್ಹ ಬಡ ಫಲಾನುಭವಿಗಳಿಗೆ ಯಾವುದೇ ಲಂಚವಿಲ್ಲದೆ ವಸತಿ ಸೌಲಭ್ಯ ಕಲ್ಪಿಸಬೇಕು. ಗ್ರಾಮಗಳಲ್ಲಿನ ಚರಂಡಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ತಕ್ಷಣ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಶರಣು ಮಂದರವಾಡ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ ಎಸ್. ಚಿಂತಿ, ಪ್ರಭಾಕರರೆಡ್ಡಿ ಕೊಂಗಂಡಿ, ಭೀಮಣ್ಣ ನಾಯಕ್, ಮಲ್ಲಣ್ಣ ನೀಲಹಳ್ಳಿ, ಭೀಮರಾಯ ಲಿಂಗೇರಿ, ಬಾಲಾಜಿ ಟಿ.ವಡಗೇಯಆ, ಪಕೀರ ಅಹ್ಮದ್, ಭೀಮರಾಯ ಹಾಲಗೇರಾ, ಮೈಬೂಬ ಪಟೇಲ್, ಮಲ್ಲಲಪ್ಪ, ದೇವಿಂದ್ರಪ್ಪ ಸೇರಿದಂತೆ ನೂರಾರು ರೈತರು ಇದ್ದರು.