ಶಹಾಪುರ: ಪಟ್ಟಣದಲ್ಲಿ ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಿ, ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮ ಸೇನೆ ಯಾದಗಿರಿ ಜಿಲ್ಲಾ ಘಟಕ ಆಗ್ರಹಿಸಿದೆ.

ಪಟ್ಟಣದ ಮಾರುಕಟ್ಟೆ ಪ್ರದೇಶಕ್ಕೆ ಮಾತ್ರ ಸೀಮಿತವಾಗಿ ಬಾಲ ಕಾರ್ಮಿಕರ ಪತ್ತೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಬಸವೇಶ್ವರ ವೃತ್ತದಿಂದ ಗ್ಯಾರೇಜ್ ಲೈನ್, ಹೊಸ ಬಸ್ ನಿಲ್ದಾಣ ಹಾಗೂ ರಾಕಂಗೇರಾ ಕಡೆಗೆ ಸಾಗುವ ರಸ್ತೆಯಲ್ಲಿರುವ ಗ್ಯಾರೇಜ್‌ಗಳು, ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಸಮರ್ಪಕ ತಪಾಸಣೆ ನಡೆಯುತ್ತಿಲ್ಲ ಎಂದು ಆರೋಪಿಸಲಾಗಿದೆ.  

ಯಾದಗಿರಿ ಜಿಲ್ಲಾ ಕಾರ್ಮಿಕ ಇಲಾಖೆಯ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಿಯಾಝ್‌ ಪಟೇಲ್ ಅವರ ಕಾರ್ಯವೈಖರಿ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಸ್ಥಳೀಯ ಪ್ರದೇಶದವರಾಗಿರುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಅಥವಾ ಮುಲಾಜು ತೋರುತ್ತಿದ್ದಾರೆಯೇ ಎಂಬ ಕುರಿತು ಸಂಬಂಧಪಟ್ಟ ಮೇಲಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಗ್ಯಾರೇಜ್ ಲೈನ್ ಸೇರಿದಂತೆ ಪಟ್ಟಣದ ಸುತ್ತಮುತ್ತಲಿನ ಎಲ್ಲ ಗ್ಯಾರೇಜ್‌ಗಳು, ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಬೇಕು. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಮಕ್ಕಳನ್ನು ಕೆಲಸದಿಂದ ಮುಕ್ತಗೊಳಿಸಿ ಶಿಕ್ಷಣ ಮತ್ತು ಪುನರ್ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದೆ.

ಬಾಲ ಕಾರ್ಮಿಕರ ತಡೆ ಕಾರ್ಯಾಚರಣೆಯನ್ನು ಶಹಾಪುರ ತಾಲೂಕಿನಾದ್ಯಂತ ವಿಸ್ತರಿಸಬೇಕು. ಸಂಬಂಧಪಟ್ಟ ಅಧಿಕಾರಿಗಳ ಕರ್ತವ್ಯ ನಿರ್ವಹಣೆಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಬೇರೆ ಅಧಿಕಾರಿಯನ್ನು ನೇಮಿಸಬೇಕು. ಕೈಗೊಂಡ ಕ್ರಮಗಳ ಕುರಿತು ಸಂಘಟನೆಗೆ ಮಾಹಿತಿ ನೀಡಬೇಕು ಎಂದು ಶ್ರೀರಾಮ ಸೇನೆ ಯಾದಗಿರಿ ಜಿಲ್ಲಾ ಘಟಕ ಆಗ್ರಹಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor