ಯಾದಗಿರಿ: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಇಂದಿರಾ ಕ್ಯಾಂಟೀನ್‌ಗೆ ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ದಿಢೀರ್ ಭೇಟಿ ನೀಡಿ ಕಾಮಗಾರಿಗಳ ಗುಣಮಟ್ಟ ಮತ್ತು ಸಾರ್ವಜನಿಕ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ವೃತ್ತದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ನಂತರ ಗಂಜ್ ಪ್ರದೇಶದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ನೈರ್ಮಲ್ಯ ಹಾಗೂ ಅಡುಗೆ ವ್ಯವಸ್ಥೆಯನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಶುಚಿ, ರುಚಿಕರ ಮತ್ತು ಗುಣಮಟ್ಟದ ಆಹಾರ ಒದಗಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಗುತ್ತಿಗೆದಾರರು ಹಾಗೂ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

ಕ್ಯಾಂಟೀನ್‌ನಲ್ಲಿ ಶುದ್ಧ ಕುಡಿಯುವ ನೀರು ನಿರಂತರವಾಗಿ ಲಭ್ಯವಿರುವಂತೆ ಆರ್‌.ಒ. ಪ್ಲಾಂಟ್ ಸಮರ್ಪಕವಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಹಣವನ್ನು ಸಾರ್ವಜನಿಕರಿಂದ ವಸೂಲಿ ಮಾಡಬಾರದು ಹಾಗೂ ದೂರುಗಳಿಗೆ ಅವಕಾಶವಾಗದಂತೆ ಸೇವೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಇದೇ ವೇಳೆ ನಗರದ ಸ್ವಚ್ಛತೆ ಮತ್ತು ರಸ್ತೆಗಳ ನೈರ್ಮಲ್ಯವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಹೊಸಹಳ್ಳಿ ಕ್ರಾಸ್‌ನಿಂದ ಗಂಜ್‌ವರೆಗಿನ ಪ್ರಮುಖ ರಸ್ತೆಯ ಎರಡೂ ಬದಿಗಳನ್ನು ಪ್ರತಿದಿನ ಸ್ವಚ್ಛವಾಗಿಡುವಂತೆ ಪೌರಕಾರ್ಮಿಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆ ವೇಳೆ ಪೌರಾಯುಕ್ತ ಉಮೇಶ್ ಚವ್ಹಾಣ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor