×
Ad

ಯಾದಗಿರಿ | ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಯಶಸ್ವಿಯಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

Update: 2025-08-27 19:33 IST

ಯಾದಗಿರಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಆಗಸ್ಟ್ 23ರಿಂದ ಆರಂಭಿಸಿದ್ದು, ವಿದ್ಯುತ್ ಮೀಟರ್ ರೀಡರುಗಳು ಎಲ್ಲಾ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಿದೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಈ ವೇಳೆ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಹೊಂದಿದೆ. ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು, ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾವಹಿಸಬೇಕು. ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 22ನೇ ಸೆಪ್ಟೆಂಬರ್ ನಿಂದ 7ನೇ ಅಕ್ಟೋಬರ್ 2025ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆರ್.ಆರ್. ನಂಬರ್) ಆಧಾರದ ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಮೀಟರ್ ರೀಡರ್ ಗಳು, ಗ್ರಾಹಕರ ಮನೆ ಬಳಕೆ ವಿದ್ಯುತ್ ಸಂಪರ್ಕದ ಮೀಟರ್ ಅನ್ನು ಓದುವುದು ಮತ್ತು ಬಿಲ್ಲಿಂಗ್ ಮಾಡುವುದರ ಜೊತೆಗೆ ಮನೆಗಳನ್ನು 'ಜಿಯೋ ಟ್ಯಾಗ್' ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವ್ಯಾಪ್ತಿಗೆ ಒಳಪಡಿಸುತ್ತಾರೆ. ಮೀಟರ್ ರೀಡರ್ ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು EDCS (ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ) ನ ಸರ್ವರ್‌ಗಳಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ 'ಮನೆ ಪಟ್ಟಿ' ಸಮೀಕ್ಷೆಯ ಉದ್ದೇಶಕ್ಕಾಗಿ 'ಮ್ಯಾಪಿಂಗ್' ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ 'ಸ್ಥಳ' (Location) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ 'ವಿಶಿಷ್ಟ್ಯ (Unique Number) ಸಂಖ್ಯೆಯನ್ನು' ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಈ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ನಡೆಯಬೇಕು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ,ಡಯಟ್, ಪದವಿಪೂರ್ವ ಕಾಲೇಜು, ಸಿಆರ್ ಪಿ, ಬಿಆರ್ ಪಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜೆಸ್ಕಾಂ, ಇಂಧನ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಈ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಶ್ರೀಧರ್ ಗೋಟುರ್, ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಾಘವೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ನಾರಾಯಣಕರ, ವ್ಯವಸ್ಥಾಪಕರಾದ ಸಾಬಯ್ಯ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News