Yadagiri | ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಇಬ್ಬರು ರೈಲ್ವೆ ಪೊಲೀಸ್ ಸಿಬ್ಬಂದಿ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ | Photo Credit : magnific
ಯಾದಗಿರಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದು, ಜೀವ ಬೆದರಿಕೆ ಹಾಕಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ರೈಲ್ವೆ ಪೊಲೀಸ್ ಸಿಬ್ಬಂದಿ ಸೇರಿ ಆರು ಮಂದಿ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಕಲಂಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ದೂರಿನಲ್ಲಿ, ಆರೋಪಿಗಳು ಯುವತಿಯನ್ನು ಯಾದಗಿರಿ, ಶಹಾಪುರ ಹಾಗೂ ಕಲಬುರಗಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ನಿರಂತರ ಬೆದರಿಕೆಗಳಿಂದ ಭಯಗೊಂಡಿದ್ದ ಯುವತಿಯನ್ನು ಆ.17ರಂದು 112 ತುರ್ತು ಸೇವೆಯ ಸಿಬ್ಬಂದಿ ರಕ್ಷಿಸಿ ಯಾದಗಿರಿಯ ಶಕ್ತಿ ಸದನಕ್ಕೆ ದಾಖಲಿಸಿದ್ದರು. ಬಳಿಕ ಶಕ್ತಿ ಸದನದ ಸಿಬ್ಬಂದಿ ಯುವತಿಯೊಂದಿಗೆ ಸಮಾಲೋಚನೆ ನಡೆಸಿ, ಸೆ.16ರಂದು ಯಾದಗಿರಿ ಮಹಿಳಾ ಪೊಲೀಸ್ ಠಾಣೆಗೆ ಕರೆತಂದು ದೂರು ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.