ಯಾದಗಿರಿ | ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ
ಯಾದಗಿರಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಆಗಸ್ಟ್ 23 ರಿಂದ ಪ್ರಾರಂಭಿಸಲಿದೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟನೆ ನೀಡಿರುವ ಮಧುಸೂಧನ್ ಆರ್ ನಾಯ್ಕ್, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಗುರಿಯೊಂದಿಗೆ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ ಸಿದ್ಧಪಡಿಸುವ ಕಾರ್ಯ ನಡೆಯಲಿದೆ. ರಾಜ್ಯದಲ್ಲಿರುವ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ ಎಂದು ಹೇಳಿದರು.
ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ ಸೆ.22ರಿಂದ ಅಕ್ಟೋಬರ್ 7ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆರ್.ಆರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ವ್ಯವಸ್ಥೆಯು ಉತ್ತಮವಾಗಿದೆ ಎಂದು ಹೇಳಿದರು.
ಮೀಟರ್ ರೀಡರ್ ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು EDCS (ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ) ನ ಸರ್ವರ‌್ ಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ 'ಮನೆ ಪಟ್ಟಿ' ಸಮೀಕ್ಷೆಯ ಉದ್ದೇಶಕ್ಕಾಗಿ 'ಮ್ಯಾಪಿಂಗ್' ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ 'ಸ್ಥಳ' (Location) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ 'ವಿಶಿಷ್ಟ (Unique Number) ಸಂಖ್ಯೆಯನ್ನು' ನೀಡಲಾಗುತ್ತದೆ. (ಅಪಾರ್ಟ್ ಮೆಂಟ್ ಗಳು / ವಾಸಸ್ಥಳಗಳ ಕ್ಲಸ್ಟರ್ ಸೇರಿದಂತೆ) ತಮ್ಮ 'ಬಿಲ್ಲಿಂಗ್ ಸೈಕಲ್'ನಲ್ಲಿ ಮೀಟರ್ ರೀಡರ್ ಗಳು ಆಗಸ್ಟ್ 23, 2025ರಿಂದ ಸದರಿ ಕೆಲಸವನ್ನು ಪ್ರಾರಂಭಿಸುತ್ತಾರೆ ಮತ್ತು ಅಭಿವೃದ್ಧಿ ಪಡಿಸಲಾದ ಆ್ಯಪ್ ನಲ್ಲಿ ದಾಖಲಿಸುತ್ತಾರೆ. ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡುತ್ತಾರೆ ಎಂದು ಹೇಳಿದರು.
ಮೊದಲ ಹಂತವು ತುಂಬಾ ಸವಾಲಿನದ್ದಾಗಿದ್ದರೂ ರಾಜ್ಯದ ಎಲ್ಲಾ ಮನೆಗಳನ್ನು ಒಳಗೊಂಡಂತೆ ವ್ಯವಸ್ಥಿತವಾಗಿ ಸಮೀಕ್ಷೆಯನ್ನು ನಡೆಸುವ ಉದ್ದೇಶಕ್ಕಾಗಿ ಇದು ಬಹಳ ಪ್ರಮುಖ ಕಾರ್ಯವಾಗಿದೆ. ಆದ್ದರಿಂದ, ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು ಮೀಟರ್ ರೀಡರ್ ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ಆಯೋಗ ಮನವಿ ಮಾಡಿದೆ.