Yadgiri | 3 ಲಕ್ಷ ರೂ. ಲಂಚ ಸ್ವೀಕಾರ : ನಗರ ಯೋಜನಾ ಕಚೇರಿಯ ಇಬ್ಬರು ಲೋಕಾಯುಕ್ತ ಬಲೆಗೆ
ಯಾದಗಿರಿ: ವಸತಿ ನಿವೇಶನಗಳನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸುವ ಕೆಲಸ ಮಾಡಿಕೊಡಲು 3 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ನಗರ ಯೋಜನಾ ಕಚೇರಿಯ ಇಬ್ಬರನ್ನು ರಾಯಚೂರು ಲೋಕಾಯುಕ್ತ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ನಗರ ಯೋಜನಾ ಕಚೇರಿಯ ಸದಸ್ಯ ಕಾರ್ಯದರ್ಶಿ ಶರಣಪ್ಪ ಹಾಗೂ ಚಾಲಕ ಸಂತೋಷಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ಮಾನ್ವಿ ನಿವಾಸಿ ಸುಧಾಕರ್ ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ವಸತಿ ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸುವ ಕೆಲಸ ಮಾಡಿಕೊಡಲು ಇಬ್ಬರೂ 3 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ರಾಯಚೂರು ಲೋಕಾಯುಕ್ತ ಪೊಲೀಸ್ ವಿಭಾಗದ ಎಸ್ಪಿ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪೊಲೀಸ್ ಇನ್ಸ್ಪೆಕ್ಟರ್ ರವಿ ಪುರುಷೋತ್ತಮ್ ಮೇಲ್ವಿಚಾರಣೆ ವಹಿಸಿದ್ದರು. ಪ್ರಕರಣದ ತನಿಖೆ ಮುಂದುವರಿದಿದೆ.