ಯಾದಗಿರಿ | ಗೃಹ ಆರೋಗ್ಯ ಯೋಜನೆಯಡಿ ಅಸಾಂಕ್ರಾಮಿಕ ರೋಗಗಳ ಚಿಕಿತ್ಸೆಯ ಅರಿವು ಕಾರ್ಯಕ್ರಮಕ್ಕೆ ಚಾಲನೆ
ಯಾದಗಿರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಾಲನೆ ನೀಡಿದರು.
ಈ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಕಾರ್ಯಕರ್ತರಿಂದ ಮನೆ ಮನೆ ಭೇಟಿ ಮೂಲಕ ಅರಿವು ಮೂಡಿಸಲಾಗುತ್ತದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಗ್ರಾಮೀಣ ಪ್ರದೇಶಗಳಲ್ಲಿ 30 ವರ್ಷ ವಯೋಮಾನದ ಜನರಲ್ಲಿ 14 ಸಾಂಕ್ರಾಮಿಕ ರೋಗಗಳ ತಪಾಸಣೆ ಹಾಗೂ ನಿರ್ವಹಣೆ ಮಾಡಲಾಗುತ್ತದೆ.
ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಡಯಾಬಿಟಿಕ್ ರೆಟಿನೋಪತಿ, ನರ ವೈಜ್ಞಾನಿಕ ಅಸ್ವಸ್ಥತೆ ಗಳು, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘ ಕಾಲದ ಮೂತ್ರ ಪಿಂಡದ ಕಾಯಿಲೆ, ದೀರ್ಘ ಕಾಲದ ಶ್ವಾಸಕೋಶದ ಕಾಯಿಲೆ, ಲಿವರ್ ಕಾಯಿಲೆ, ರಕ್ತ ಹೀನತೆ, ಗರ್ಭಕೋಶದ ಕ್ಯಾನ್ಸರ್ ಹಾಗೂ ಪಿತ್ತ ಜನಾಂಗದ ಕಾಯಿಲೆ ಒಳಗೊಂಡಿವೆ. ಸಚಿವರು ಇದೇ ಸಂದರ್ಭದಲ್ಲಿ ಗೃಹ ಆರೋಗ್ಯ ಕಾರ್ಯಕ್ರಮದ ಕೈಪಿಡಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ರಾಯಚೂರು ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾದ ಜಿ.ಕುಮಾರ್ ನಾಯಕ್, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ್, ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಎಸ್.ಪಿ.ಪೃಥ್ವಿಕ್ ಶಂಕರ್, ಡಿಹೆಚ್ಓ ಮಹೇಶ್ ಬಿರಾದಾರ್, ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.