ಯಾದಗಿರಿ: ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಕೇಂದ್ರದಿಂದ ಬರ ಪರಿಹಾರ ಅನುದಾನ ಮಂಜೂರು ಮಾಡಿಸುವಂತೆ ಒತ್ತಾಯಿಸಲು ರಾಜ್ಯದ ಬಿಜೆಪಿ ನಾಯಕರು ತಾಕತ್ತು ತೋರಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಸವಾಲು ಹಾಕಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರ ಈಗಾಗಲೇ ನೂರಾರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ರಾಜ್ಯದ ರೈತರು ಹಾಗೂ ಜನರ ಬಗ್ಗೆ ಬಿಜೆಪಿ ನಾಯಕರಿಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕಾಗಿ ವಿಶೇಷ ಅನುದಾನವನ್ನು ಮಂಜೂರು ಮಾಡಿಸಿಕೊಂಡು ಬರಬೇಕು ಎಂದು ಆಗ್ರಹಿಸಿದರು.

ಬರಗಾಲ ಆವರಿಸಿದ್ದರೂ ಇದುವರೆಗೆ ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ. ಬಿಜೆಪಿ ನಾಯಕರು ರೈತರ ಮನೆಗಳಿಗೆ ಹಾಗೂ ಜಮೀನುಗಳಿಗೆ ತೆರಳಿ ಬೆಳೆ ಪರಿಶೀಲನೆ ನಡೆಸುತ್ತಿರುವುದು ಕೇವಲ ನಾಟಕವಾಗಿದೆ. ಕೇಂದ್ರದಿಂದ ಅನುದಾನ ತಂದು ರೈತರಿಗೆ ಪರಿಹಾರ ಕೊಡಿಸಬೇಕು ಎಂದು ಅವರು ಒತ್ತಾಯಿಸಿದರು.

ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ಲಕ್ಷಾಂತರ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಪಾವತಿಯಾಗುತ್ತದೆ. ಆದರೆ ರಾಜ್ಯಕ್ಕೆ ಸೇರಬೇಕಾದ ಹಣವನ್ನು ನೀಡುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕರ್ನಾಟಕದ ಮೇಲೆ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ರಾಜ್ಯದಲ್ಲಿ ಬರಗಾಲದಿಂದ ಜನರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸುವುದು ಕೇಂದ್ರ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಕೇಂದ್ರ ಸರ್ಕಾರ ಕೂಡಲೇ ಬರ ಪರಿಹಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಡಾ. ಭೀಮಣ್ಣ ಮೇಟಿ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor