Yadgiri | ಕೋಲಿ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರಿಸಲು ಸಂಪುಟ ನಿರ್ಣಯ ಕೈಗೊಳ್ಳಲಿ: ಉಮೇಶ ಕೆ.ಮುದ್ನಾಳ
ಯಾದಗಿರಿ: ದೇಶದ 16 ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ ಹಾಗೂ 9 ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಕೋಲಿ ಸಮಾಜಕ್ಕೆ ಕರ್ನಾಟಕದಲ್ಲಿ ಅನ್ಯಾಯವಾಗುತ್ತಿದೆ. ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಪ್ರಸ್ತಾವನೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಕೇಂದ್ರ ಸರ್ಕಾರಕ್ಕೆ ಮರುಸಲ್ಲಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿಯೇ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಪ್ರಸ್ತಾವನೆ ಈಗಾಗಲೇ ಮೂರು ಬಾರಿ ಕೇಂದ್ರ ಸರ್ಕಾರದಿಂದ ಹಿಂದಿರುಗಿದೆ. ಅಗತ್ಯ ದಾಖಲೆಗಳು ಹಾಗೂ ಅರ್ಹತೆಗಳಿದ್ದರೂ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಸಮಾಜಕ್ಕೆ ಸಾಮಾಜಿಕ ನ್ಯಾಯ ದೊರೆಯುತ್ತಿಲ್ಲ. ವಿಠ್ಠಲ್ ಹೇರೂರ ಸೇರಿದಂತೆ ಅನೇಕರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಬೇಡಿಕೆ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನವರಿ 21ರಂದು ಆಚರಿಸುವ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ರಾಜ್ಯ ಸರ್ಕಾರ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡಬೇಕು. ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಬೇಕು. ಅಲ್ಲದೆ, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಸಮುದಾಯ ಭವನ ನಿರ್ಮಿಸಲು ಐದು ಎಕರೆ ಜಮೀನು ಹಾಗೂ ಭವನ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.