ಯಾದಗಿರಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡಿದ್ದು, ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಟ್ಯಂತರ ಯುವಜನರು ಉದ್ಯೋಗವಿಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಈ ಸಮಸ್ಯೆಯತ್ತ ಗಮನ ಹರಿಸದಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಹೇಳಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೀಗ ಅದನ್ನು ಸಂಪೂರ್ಣವಾಗಿ ಮರೆತಿರುವಂತೆ ಕಾಣುತ್ತಿದೆ. ದೇಶದಲ್ಲಿ ಏರುತ್ತಿರುವ ನಿರುದ್ಯೋಗ ಸಮಸ್ಯೆಯೇ ಇದಕ್ಕೆ ತಾಜಾ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ದೇಶದ ಮುಂದಿನ ಪೀಳಿಗೆ ಯುವಜನರಾಗಿದ್ದಾರೆ. ಅವರಿಗೆ ಉದ್ಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಯುವಜನರಿಗೆ ಉದ್ಯೋಗ ದೊರೆತರೆ ಬಲಿಷ್ಠ ದೇಶ ಕಟ್ಟಲು ಅನುಕೂಲವಾಗುತ್ತದೆ ಎಂಬುದನ್ನು ಸರ್ಕಾರ ಮರೆತಂತೆ ಕಾಣುತ್ತಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಗಮನ ಹರಿಸುತ್ತಿಲ್ಲ. ಬರೀ ರಾಜಕೀಯ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾರಕ ಬೆಳವಣಿಗೆಯಾಗಿದೆ ಎಂದು ಹೇಳಿದರು.

ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇತ್ತ ಅನ್ನದಾತರು ಸಂಕಷ್ಟದಲ್ಲಿದ್ದಾರೆ. ಅತ್ತ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಇವುಗಳ ಕುರಿತು ಚಿಂತಿಸದ ಸರ್ಕಾರ ಸುಳ್ಳು ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಜನತೆ ಬೀದಿಗಿಳಿದು ಹೋರಾಟ ಮಾಡುವ ಮುನ್ನವೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜನರು ಸರ್ಕಾರಕ್ಕೆ ತಕ್ಕ ಪಾಠ ಕಲಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಭೀಮಣ್ಣ ಮೇಟಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor