Yadgiri | ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ
ಯಾದಗಿರಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ದುರುದ್ದೇಶಪೂರ್ವಕವಾಗಿ ಎಫ್‌ಐಆರ್ ದಾಖಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು “ಪೊಲೀಸ್ ವ್ಯವಸ್ಥೆಯ ದುರ್ಬಳಕೆ: ಕಾಂಗ್ರೆಸ್ ಬೆದರುವುದಿಲ್ಲ, ಹೆದರುವುದಿಲ್ಲ”, “ಸಾಮಾಜಿಕ ನ್ಯಾಯದ ಪರ ರಾಹುಲ್ ಗಾಂಧಿ” ಹಾಗೂ “ಶುದ್ಧೀಕರಣದ ಹೆಸರಿನಲ್ಲಿ ಜಾತಿವಾದ” ಎಂಬ ಬರಹಗಳಿದ್ದ ಫಲಕಗಳನ್ನು ಪ್ರದರ್ಶಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣದ ಹೆಸರಿನಲ್ಲಿ ಸ್ವಚ್ಛಗೊಳಿಸಿರುವ ಘಟನೆ ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯವನ್ನು ತೋರಿಸುತ್ತದೆ. ಈ ಅನ್ಯಾಯದ ವಿರುದ್ಧ ರಾಹುಲ್ ಗಾಂಧಿ ಧ್ವನಿ ಎತ್ತಿ ದೇಶದ ಗಮನ ಸೆಳೆದಿದ್ದು, ಅದನ್ನು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ಶುದ್ಧೀಕರಣದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಈ ಕುರಿತು ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಖಂಡನೀಯ. ಜನರ ಧ್ವನಿಯನ್ನು ಹತ್ತಿಕ್ಕಲು ಹಾಗೂ ಜನರ ಗಮನವನ್ನು ಬೇರೆಡೆ ಸೆಳೆಯಲು ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ದೂರಿದರು.
ದಲಿತರು ಎದುರಿಸುತ್ತಿರುವ ಅನ್ಯಾಯ, ಅವಮಾನ ಹಾಗೂ ತಾರತಮ್ಯದ ಕುರಿತು ರಾಹುಲ್ ಗಾಂಧಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ದಲಿತರ ಮೇಲಿನ ದೌರ್ಜನ್ಯದ ವಿರುದ್ಧ ಮಾತನಾಡುವವರನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಯುಡಾ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸರೆಡ್ಡಿ ಅನಪುರ, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಭೀಮಣ್ಣ ಮೇಟಿ, ಶ್ಯಾಮಸನ್ ಮಾಳಿಕೇರಿ, ಸುದರ್ಶನ ನಾಯಕ, ಮರೆಪ್ಪ ಬಿಳಾರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.