ಯಾದಗಿರಿ: ಪಂಚಾಯತ್‌ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಿಸಿ ರಾಜಕೀಯ ಒಳಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಕೂಡಲೇ ಆದೇಶ ಹೊರಡಿಸಬೇಕು ಎಂದು ಮಾದಿಗ ದಂಡೋರ MRPS ಹೋರಾಟದ ರಾಜ್ಯ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾಧ್ಯಕ್ಷ ಕಾಶಪ್ಪ ಮಾದಿಗ ಒತ್ತಾಯಿಸಿದ್ದಾರೆ.

ಮಂಗಳವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಒಳಮೀಸಲಾತಿ ಕಲ್ಪಿಸಿದ ಮಾದರಿಯಲ್ಲಿಯೇ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ರಾಜಕೀಯ ಒಳಮೀಸಲಾತಿ ಜಾರಿಗೊಳಿಸಬೇಕು. ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಒಳಮೀಸಲಾತಿ ಕಲ್ಪಿಸಿರುವಂತೆ ಪರಿಶಿಷ್ಟ ಜಾತಿಗಳಿಗೂ ರಾಜಕೀಯ ಪ್ರಾತಿನಿಧ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹೊಲೆಯ ಮತ್ತು ಮಾದಿಗ ಸಮುದಾಯಗಳು ಜಾತಿ ತಾರತಮ್ಯದಿಂದಾಗಿ ರಾಜಕೀಯವಾಗಿ ಹಿನ್ನಡೆ ಅನುಭವಿಸುತ್ತಿವೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪ್ರಬಲ ಸಮುದಾಯಗಳು ಒಗ್ಗಟ್ಟಾಗಿ ಸ್ಪರ್ಧಿಸುವುದರಿಂದ ಪರಿಶಿಷ್ಟ ಜಾತಿಗಳ ಅಭ್ಯರ್ಥಿಗಳು ಸೋಲನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಐದು ದಶಕಗಳಿಂದ ಈ ಸಮಸ್ಯೆ ಮುಂದುವರಿದಿದ್ದು, ಪ್ರತಿ ತಾಲ್ಲೂಕಿನಲ್ಲೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳ ಅಭ್ಯರ್ಥಿಗಳು ಸುಮಾರು 20ರಿಂದ 25 ಸ್ಥಾನಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಆಶಯದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಕ್ರಮ ಕೈಗೊಂಡಿರುವ ಸರ್ಕಾರ, ರಾಜಕೀಯ ಕ್ಷೇತ್ರದಲ್ಲಿಯೂ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

2026–27ನೇ ಸಾಲಿನಲ್ಲಿ ನಡೆಯಲಿರುವ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೇ ಪರಿಶಿಷ್ಟ ಜಾತಿಗಳ ಪ್ರವರ್ಗ-ಎಗೆ ಶೇ. 5.25, ಪ್ರವರ್ಗ-ಬಿಗೆ ಶೇ. 5.25 ಹಾಗೂ ಪ್ರವರ್ಗ-ಸಿಗೆ ಶೇ. 4.5ರಷ್ಟು ರಾಜಕೀಯ ಒಳಮೀಸಲಾತಿ ಕಲ್ಪಿಸಬೇಕು. ಈ ಕುರಿತು ರಾಜ್ಯ ಸರ್ಕಾರ ತಕ್ಷಣ ಆದೇಶ ಹೊರಡಿಸಿ ಪರಿಶಿಷ್ಟ ಜಾತಿಗಳ ಸಮುದಾಯಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರಕಿಸಿಕೊಡಬೇಕು ಎಂದು ಕಾಶಪ್ಪ ಮಾದಿಗ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor