ಯಾದಗಿರಿ: ಜಿಲ್ಲೆಯ ಶಹಾಪುರ ಕ್ಷೇತ್ರವೊಂದನ್ನೇ ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಸರ್ಕಾರ, ಉಳಿದ ಮೂರು ವಿಧಾನಸಭಾ ಕ್ಷೇತ್ರಗಳನ್ನೂ ಬರಪೀಡಿತವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ನೆರೆಯ ಕಲಬುರಗಿ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಸರ್ಕಾರ, ಯಾದಗಿರಿ ಜಿಲ್ಲೆಗೆ ಮಾತ್ರ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಶಹಾಪುರ ಕ್ಷೇತ್ರವೊಂದನ್ನೇ ಬರಪೀಡಿತವೆಂದು ಘೋಷಿಸಿರುವುದು ‘ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ’ ಎಂಬಂತಾಗಿದೆ ಎಂದು ಟೀಕಿಸಿದರು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೆಸರು, ಹತ್ತಿ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಎರಡು ಬಾರಿ ಬಿತ್ತನೆ ಮಾಡಿದ್ದರೂ ಮಳೆ ಕೈಕೊಟ್ಟ ಪರಿಣಾಮ ಹಲವು ಕಡೆ ಬೀಜಗಳು ಮೊಳಕೆಯೊಡೆಯದೇ ನಷ್ಟವಾಗಿದೆ. ಮೊಳಕೆಯೊಡೆದ ಬೆಳೆಗಳೂ ನೀರಿನ ಕೊರತೆಯಿಂದ ಒಣಗಿ ಹೋಗಿದ್ದು, ರೈತರು ಮರುಬಿತ್ತನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರು ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಉಳಿದ ಮೂರು ಕ್ಷೇತ್ರಗಳನ್ನೂ ಬರಪೀಡಿತವೆಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ರೈತರ ಸಮಸ್ಯೆಗಳ ಕುರಿತು ಶಾಸಕರು, ಸಚಿವರು ಹಾಗೂ ಸಂಸದರು ಸರ್ಕಾರದ ಗಮನ ಸೆಳೆದು ಧ್ವನಿ ಎತ್ತಬೇಕು. ಬರದ ತೀವ್ರತೆಯನ್ನು ಪರಿಗಣಿಸಿ ಯಾವುದೇ ತಾರತಮ್ಯವಿಲ್ಲದೆ ಜಿಲ್ಲೆಯ ನಾಲ್ಕೂ ಕ್ಷೇತ್ರಗಳ ರೈತರಿಗೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮರೆಪ್ಪ ಚಟ್ಟೇರಕರ್ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor