Yadgiri | ಪ್ರಜಾಪ್ರಭುತ್ವದ ಮೌಲ್ಯಗಳೇ ಭಾರತದ ಶಕ್ತಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಯಾದಗಿರಿ: ಭಾರತದ ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದಂತಹ ಸೌಹಾರ್ದಯುತ ಮೌಲ್ಯಗಳ ಭದ್ರ ಬುನಾದಿಯ ಮೇಲೆ ನಿರ್ಮಾಣಗೊಂಡ ವಿಶಿಷ್ಟ ವ್ಯವಸ್ಥೆಯಾಗಿದೆ ಎಂದು ನಗರ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಿದರು.
ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆ, ಅಭಿವೃದ್ಧಿ, ಶಾಂತಿ ಮತ್ತು ಸ್ಥಿರತೆಯ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಘೋಷಿಸಿವೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ ಭ್ರಾತೃತ್ವದ ಆದರ್ಶಗಳಿಗೆ ಪ್ರಮುಖ ಸ್ಥಾನವಿದ್ದು, ಪ್ರತಿಯೊಬ್ಬ ನಾಗರಿಕರೂ ಈ ಮೌಲ್ಯಗಳನ್ನು ಜಗತ್ತಿಗೆ ಸಾರುವ ಜವಾಬ್ದಾರಿ ಹೊಂದಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಮಾತನಾಡಿ, ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ಜೊತೆಗೆ ನಾಗರಿಕರ ಕರ್ತವ್ಯಗಳನ್ನೂ ಸ್ಪಷ್ಟಪಡಿಸಿದೆ. ಡಾ. ಅಂಬೇಡ್ಕರ್ ಅವರ “ಶಿಕ್ಷಣ, ಸಂಘಟನೆ, ಸಮಾಜಸೇವೆ” ಎಂಬ ಸಂದೇಶವನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸಮಾಜದ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುವ ಮೂಲಕವೇ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಬಹುದು. ಸಂವಿಧಾನದ ಆಶಯಗಳನ್ನು ಸಂಪೂರ್ಣವಾಗಿ ಅರಿತು ಆದರ್ಶ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ನಿವೃತ್ತ ಪ್ರಾಂಶುಪಾಲ ಸರ್ವೋದಯ ಶಿವಪುತ್ರ ಉಪನ್ಯಾಸ ನೀಡಿ, ಭಗವಾನ್ ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಸಮಾನತೆ ಮತ್ತು ಮಾನವೀಯತೆಯ ಆಧಾರಿತ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಪ್ರಾಸ್ತಾವಿಕವಾಗಿ ಮಾತನಾಡಿ, ಯುವಜನರಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ಯುವ ಸಂಸತ್ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಮರೆಯಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಡಿಡಿಪಿಐ ಚನ್ನಬಸಪ್ಪ ಮುಧೋಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.