ಯಾದಗಿರಿ: ಸಂವಿಧಾನದಲ್ಲಿ ಮನುಸ್ಮೃತಿಯ ಆಶಯಗಳಿವೆ ಎನ್ನುವ ಮೂಲಕ ಸಮಾಜವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ಕನ್ಹೇರಿಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯವಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂವಿಧಾನದಲ್ಲಿ ಮನುಸ್ಮೃತಿಯ ಆಶಯಗಳಿವೆ ಎನ್ನುವ ಮೂಲಕ ಸ್ವಾಮೀಜಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ತಿಳಿಸಿದರು.

ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ. ಅದರಲ್ಲಿ ಯಾವುದೇ ರೀತಿಯ ಮನುಸ್ಮೃತಿಯ ಆಶಯಗಳಿಗೆ ಅವಕಾಶವಿಲ್ಲ. ಆದರೆ, ಸ್ವಾಮೀಜಿ ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂವಿಧಾನವನ್ನು ಯಾವುದೇ ಕಾರಣಕ್ಕೂ ಮನುಸ್ಮೃತಿಗೆ ಹೋಲಿಸಬಾರದು. ದೇಶದಲ್ಲಿ ಮನುಸ್ಮೃತಿಯನ್ನು ಮರುಸ್ಥಾಪಿಸಲು ಎಲ್ಲ ರೀತಿಯಲ್ಲೂ ಹುನ್ನಾರ ನಡೆಯುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಮನುಸ್ಮೃತಿಯಲ್ಲಿ ಮೇಲು-ಕೀಳು ಎಂಬ ತಾರತಮ್ಯವಿದೆ. ಆದರೆ, ಸಂವಿಧಾನವು ಎಲ್ಲರಿಗೂ ಸಮಾನತೆಯ ಹಕ್ಕನ್ನು ನೀಡಿದೆ. ಸಂವಿಧಾನದ ಕುರಿತು ಹಗುರವಾಗಿ ಮಾತನಾಡುವುದನ್ನು ಮೊದಲು ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದರು.

ತಪ್ಪು ಮಾಹಿತಿ ನೀಡಿದ್ದಾರೆ ಎನ್ನಲಾದ ಸ್ವಾಮೀಜಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಒಂದು ವೇಳೆ ವಿಳಂಬ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಅವರ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸ್ವಾಮೀಜಿಗಳು ಜವಾಬ್ದಾರಿಯುತವಾಗಿ ಮಾತನಾಡುವುದನ್ನು ಕಲಿಯಬೇಕು. ಯಾರ ಮನಸ್ಸಿಗೂ ನೋವುಂಟು ಮಾಡುವಂತಹ ಹೇಳಿಕೆಗಳನ್ನು ನೀಡಬಾರದು. ಜಗತ್ತಿಗೆ ಮಹಾನ್ ಸಂವಿಧಾನವನ್ನು ನೀಡಿದ ಕೀರ್ತಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor