×
Ad

Yadgiri | ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ : ಪೋಷಕರಿಗೆ ಶಾಸಕ ಶರಣಗೌಡ ಕಂದಕೂರ ಮನವಿ

Update: 2026-07-01 19:00 IST

ಯಾದಗಿರಿ : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಶಿಕ್ಷಣ ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಕರೆ ನೀಡಿದರು.

ತಾಲೂಕಿನ ಲಿಂಗೇರಿ ಸ್ಟೇಷನ್ ಸರ್ಕಾರಿ ಪ್ರೌಢ ಶಾಲೆಯಲ್ಲಿ 60 ಲಕ್ಷ ರೂ. ವೆಚ್ಚದ ಶಾಲಾ ಕೊಠಡಿಗಳು ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಶಾಲೆಗಳ ಕುಂದುಕೊರತೆಗಳನ್ನು ಗ್ರಾಮ ಪಂಚಾಯಿತಿಗಳು ತ್ವರಿತವಾಗಿ ಬಗೆಹರಿಸಬೇಕು ಎಂದು ಸಲಹೆ ನೀಡಿದ ಅವರು, ಸರ್ಕಾರದ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸಮಾನವಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದರು.

ಡಿಡಿಪಿಐ ಚನ್ನಬಸಪ್ಪ ಮುಧೋಳ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಶಾಸಕ ಶರಣಗೌಡ ಕಂದಕೂರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಬಳಿಕ ಕಿಲ್ಲನಕೇರಾ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ, ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಜಿಲ್ಲೆಯ ಹಿಂದುಳಿದ ಹಣೆಪಟ್ಟಿಯನ್ನು ಕಳಚಬಹುದು ಎಂದು ಹೇಳಿದರು.

ರೈತರು ಜುಲೈ 15ರೊಳಗೆ ಫಸಲ್ ಭೀಮಾ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಬೇಕು. ವಿಮೆ ಮಾಡಿಸದ ರೈತರಿಗೆ ಮುಂದಿನ ದಿನಗಳಲ್ಲಿ ಸರ್ಕಾರಿ ಪರಿಹಾರ ದೊರೆಯುವುದಿಲ್ಲ ಎಂದು ಎಚ್ಚರಿಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರು ಗಮನ ಸೆಳೆದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಬೋರ್‌ವೆಲ್ ಕೊರೆಸಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

ಮಾಧ್ವಾರ ಸರ್ಕಾರಿ ಪ್ರೌಢ ಶಾಲೆಯಲ್ಲಿ 80 ಲಕ್ಷ ರೂ. ವೆಚ್ಚದ ಶಾಲಾ ಕೊಠಡಿಗಳು ಹಾಗೂ ಭೋಜನಾಲಯ ನಿರ್ಮಾಣ ಕಾಮಗಾರಿಗೂ ಶಂಕುಸ್ಥಾಪನೆ ನೆರವೇರಿಸಿದ ಅವರು, ಶಾಲೆಗಳ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ತಾವು ಬದ್ಧರಾಗಿದ್ದು, ಪೋಷಕರು ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಬೆಳೆ ವಿಮೆ ಯೋಜನೆ ಹಾಗೂ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಡಂಗುರ ಸಾರುವ ಮೂಲಕ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಿಲ್ಲನಕೇರಾ ಗ್ರಾಮದ ಐತಿಹಾಸಿಕ ಅಗಸಿಗಳ ಸಂರಕ್ಷಣೆಗೂ ಅನುದಾನ ನೀಡುವುದಾಗಿ ಭರವಸೆ ನೀಡಿದ ಅವರು, ಗ್ರಾಮದ ಕೆರೆಗಳಿಗೆ ನೀರು ಹರಿಸುವುದು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರ ಜಿಲ್ಲಾ ಅಧಿಕಾರಿ ಕಿರಣಕುಮಾರ, ಮಲ್ಹಾರ ಪಿಡಿಒ ಸರೋಜಾ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ, ಮಲ್ಲಣಗೌಡ ಹಳಿಮನಿ ಕೌಳೂರು, ಶರಣಪ್ಪಗೌಡ ಹೊಸಳ್ಳಿ, ರಾಜಶೇಖರಗೌಡ ಕಿಲ್ಲನಕೇರಾ,ಮಹಿಪಾಲರಡ್ಡಿ ಮಲ್ಹಾರ್,ಮಹಿಪಾಲರಡ್ಡಿ ಬಳಿಚಕ್ರ, ಲಕ್ಷö್ಮಣ ನಾಯಕ ಕೂಡ್ಲೂರ, ಸಾಹೇಗೌಡ ಗೌಡಗೇರಾ, ಮಲ್ಲೇಶ ನಾಯಕ, ಆನಂದ ವಡವಟ, ಮಲ್ಲಿಕಾರ್ಜುನ ಅರುಣಿ, ಮರೆಪ್ಪ ನಾಟೆಕಾರ್, ವಿರಪಣ್ಣ ಸಾಹುಕಾರ, ಬನಶಂಕರಗೌಡ, ಅಲ್ಲಾವುದ್ದಿನ್ ನೀಲಹಳ್ಳಿ, ಮೋದಿನ್‌ಸಾಬ, ಸೇರಿದಂತೆ ಇತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News