Yadgiri | ಅಂತರರಾಷ್ಟ್ರೀಯ ಸೇವಾ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ
ಯಾದಗಿರಿ: ವಿಯೆಟ್ನಾಂನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ವೈಜ್ಞಾನಿಕ ಶೃಂಗಸಭೆಯಲ್ಲಿ ವಿಶೇಷ ಸಾಧನೆಗೈದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸೇವಾ ಪ್ರಶಸ್ತಿಗೆ ಭಾಜನರಾದ ದಿನೇಶಕುಮಾರ ಜೈನ್ ಹಾಗೂ ಅಜೀಜ್ ಅಹ್ಮದ್ ಶಹನಾ ಅವರಿಗೆ ನಗರದ ಓಲ್ಡ್ ಬಜಾರ್‌ನ ಮಹಾವೀರ ಭವನದಲ್ಲಿ ಶುಕ್ರವಾರ ಅಭಿನಂದನಾ ಸಮಾರಂಭ ಆಯೋಜಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಗುರುಮಠಕಲ್ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಸಾಧಕರಿಗೆ ಸಮಾಜದಿಂದ ದೊರೆಯುವ ಗೌರವ ಮತ್ತಷ್ಟು ಸಾಧನೆಗೆ ಪ್ರೇರಣೆಯಾಗುತ್ತದೆ. ವಿದೇಶದ ನೆಲದಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವೈಜ್ಞಾನಿಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯ ಪ್ರತಿಭಾವಂತರಿಗೆ ಜಾಗತಿಕ ಮಟ್ಟದಲ್ಲಿ ದೊರೆತಿರುವ ಈ ಗೌರವ ಎಲ್ಲರಿಗೂ ಸಂತಸ ತಂದಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಕಲ್ ನಟರಾಜ್ ವಹಿಸಿದ್ದರು. ಈ ವೇಳೆ ಸನ್ಮಾನ ಸ್ವೀಕರಿಸಿದ ದಿನೇಶಕುಮಾರ ಜೈನ್ ಹಾಗೂ ಅಜೀಜ್ ಅಹ್ಮದ್ ಶಹನಾ ಅವರು ತಮ್ಮನ್ನು ಗೌರವಿಸಿದ ಸಂಘಟಕರು ಹಾಗೂ ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ, ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ, ಡಿಡಿಯು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಭೀಮಣ್ಣ ಮೇಟಿ, ಪರಿಷತ್ತಿನ ಜಿಲ್ಲಾಧ್ಯಕ್ಷ ಗುಂಡಪ್ಪ ಕಲಬುರಗಿ, ಪತ್ರಕರ್ತ ಇಂಧೂದರ ಸಿನ್ನೂರ್, ಬಸವರಾಜ ಜೈನ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.