Yadgiri | ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
ಯಾದಗಿರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು ಹಾಗೂ ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಪೂರ್ಣಾವಧಿ ಅಥವಾ ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರು, ಸ್ಥಾನಿಕ ಸಂಪಾದಕರು ಅಥವಾ ಮುಖ್ಯಸ್ಥರ ಶಿಫಾರಸು ಪತ್ರ ಹಾಗೂ ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ ಸೇವಾ ಸಿಂಧು ಪೋರ್ಟಲ್ ಮೂಲಕ ಸಮೀಪದ ಗ್ರಾಮ-1 ಕೇಂದ್ರದಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಲಾಗಿದ್ದು, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರು, ಸ್ಥಾನಿಕ ಸಂಪಾದಕರು ಅಥವಾ ಮುಖ್ಯಸ್ಥರ ಶಿಫಾರಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಹಾಗೂ ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್‌ಗಳನ್ನು ನೀಡುತ್ತಿದೆ ಎಂದರು.
ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ-1 ಕೇಂದ್ರದಲ್ಲಿ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.