×
Ad

Yadgiri | ಗ್ಯಾರಂಟಿ ಸ್ಥಗಿತಗೊಳಿಸಿ ರೈತರ ಸಾಲಮನ್ನಾ ಮಾಡಿ: ಶಾಸಕ ಶರಣಗೌಡ ಕಂದಕೂರ

Update: 2026-07-09 18:44 IST

ಯಾದಗಿರಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ರಾಜ್ಯದ ಎಲ್ಲ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಆಗ್ರಹಿಸಿದರು.

ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆಯ ಅಭಾವದಿಂದ ಬೆಳೆಗಳು ಹಾನಿಗೊಳಗಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹಲವೆಡೆ ರೈತರು ಉದ್ಯೋಗ ಅರಸಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಇದಕ್ಕಾಗಿ ಸುಮಾರು 30ರಿಂದ 40 ಸಾವಿರ ಕೋಟಿ ರೂ. ವೆಚ್ಚವಾಗಬಹುದು. ಅಗತ್ಯವಿದ್ದರೆ ಒಂದು ವರ್ಷದವರೆಗೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಿ, ಆ ಹಣವನ್ನು ರೈತರ ಸಾಲಮನ್ನಾಕ್ಕೆ ಬಳಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದರು.

ಸಾಲದ ಒತ್ತಡದಿಂದ ರೈತರು ಆತ್ಮಹತ್ಯೆಯಂತಹ ದುರ್ಘಟನೆಗಳತ್ತ ಸಾಗದಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಮಾಡಿದ್ದರು. ಅದೇ ರೀತಿಯಲ್ಲಿ ಈಗಿನ ಸರ್ಕಾರವೂ ರೈತರ ಹಿತದೃಷ್ಟಿಯಿಂದ ಸಾಲಮನ್ನಾ ಘೋಷಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News