Yadgiri | ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಡಿಸಿ ಸೂಚನೆ
ಯಾದಗಿರಿ: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾದಗಿರಿ–ಸೈದಾಪುರ ಜಿಲ್ಲಾ ಮುಖ್ಯ ರಸ್ತೆಯ ಮರುಡಾಂಬರೀಕರಣ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 7 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯಾದಗಿರಿ–ಸೈದಾಪುರ ಜಿಲ್ಲಾ ಮುಖ್ಯ ರಸ್ತೆಯ 0.00ರಿಂದ 7.20 ಕಿ.ಮೀ.ವರೆಗಿನ ಆಯ್ದ ಭಾಗಗಳ ಮರುಡಾಂಬರೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕಾಮಗಾರಿ ನಿರ್ವಹಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ ನಗರದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ನೀರು ಶುದ್ಧೀಕರಣ ಪ್ರಕ್ರಿಯೆಯನ್ನು ಅವಲೋಕಿಸಿದರು. ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ವರದಿಯ ಆಧಾರದ ಮೇಲೆ ಸಾರ್ವಜನಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಡೆಂಗ್ಯೂ, ಮಲೇರಿಯಾ ಹಾಗೂ ಗ್ಯಾಸ್ಟ್ರೋಎಂಟರೈಟಿಸ್ (ಜಿ.ಇ.) ಸೇರಿದಂತೆ ನೀರಿನಿಂದ ಹರಡುವ ರೋಗಗಳ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಯೂ ಅವರು ಸೂಚನೆ ನೀಡಿದರು.
ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ ನಿರ್ಮಿಸಲಾಗುತ್ತಿರುವ 7 ಎಂಎಲ್‌ಡಿ ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಎಂಟು ತಿಂಗಳಾದರೂ ಆರಂಭವಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಉಳಿದ ಅವಧಿಯೊಳಗೆ ಕಾಮಗಾರಿ ಆರಂಭಿಸಿ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಮಲಾ ನೆಹರು ಉದ್ಯಾನವನದಲ್ಲಿನ ಓವರ್‌ಹೆಡ್ ಟ್ಯಾಂಕ್ ಕಾಮಗಾರಿಯನ್ನೂ ಪರಿಶೀಲಿಸಿದ ಅವರು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ ಸೂಚಿಸಿದರು.
ಪರಿಶೀಲನೆ ವೇಳೆ ಲೋಕೋಪಯೋಗಿ ಇಲಾಖೆ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.