Yadgiri | ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಸಲು ಸಾಧ್ಯ: ಡಿಸಿ ರಾಹುಲ್ ಪಾಂಡ್ವೆ
‘ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ–2026’ ಕಾರ್ಯಕ್ರಮ
ಯಾದಗಿರಿ: ದಾನಗಳಲ್ಲೇ ರಕ್ತದಾನ ಶ್ರೇಷ್ಠವಾಗಿದ್ದು, ಇದರಿಂದ ಮತ್ತೊಬ್ಬರ ಜೀವ ಉಳಿಸಲು ಸಾಧ್ಯವಿದೆ. ಪ್ರತಿಯೊಬ್ಬ ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 25ರಂದು ಆಯೋಜಿಸಿದ್ದ ‘ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ–2026’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಕ್ತಕ್ಕೆ ನಿರಂತರ ಬೇಡಿಕೆ ಇರುತ್ತದೆ. ಆದ್ದರಿಂದ ರಕ್ತದಾನದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬದಿಗಿಟ್ಟು ಪ್ರತಿಯೊಬ್ಬರೂ ರಕ್ತದಾನಕ್ಕೆ ಮುಂದಾಗಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜೀವಕುಮಾರ ರಾಯಚೂರಕರ್ ಮಾತನಾಡಿ, ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ನಮ್ಮ ಒಂದು ಹನಿ ರಕ್ತವು ಮತ್ತೊಬ್ಬರ ಬದುಕಿನಲ್ಲಿ ಹೊಸ ಭರವಸೆಯನ್ನು ಮೂಡಿಸಬಲ್ಲದು. ಅರ್ಹರೆಲ್ಲರೂ ಸ್ವಯಂಪ್ರೇರಿತ ರಕ್ತದಾನಕ್ಕೆ ಮುಂದಾಗಿ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.
‘ಮಾನವೀಯತೆಯ ಒಂದು ಹನಿ ರಕ್ತ–ನಡಿ, ಜೀವ ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತಿದೆ. ರಕ್ತದಾನವು ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ನಮ್ಮ ರಕ್ತದಾನ ಮತ್ತೊಬ್ಬರಿಗೆ ಜೀವದಾನವಾಗಲಿದೆ. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನದ ಮಹತ್ವವನ್ನು ಸಾರುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಯಾದಗಿರಿ ಹಾಗೂ ಗುರುಮಠಕಲ್ ಸೇರಿದಂತೆ ವಿವಿಧ ಪ್ರದೇಶಗಳ ಒಟ್ಟು 44 ಮಂದಿ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಹಣಮಂತರೆಡ್ಡಿ, ಡಾ. ಸಿದ್ದಲಿಂಗರೆಡ್ಡಿ, ಲಕ್ಷ್ಮೀ ಮುಂಡಾಸ್, ತುಲಸಿರಾಮ ಚವ್ಹಾಣ, ಚೇತನಕುಮಾರ ಮಿಲ್ಟಿರಿ, ಅಭಿಲಾಶ, ರಾಜೇಂದ್ರ, ಮಲ್ಲಪ್ಪ, ಸುಭಾಷ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.