Yadgiri | ಕೆಪಿಎಸ್‌ಸಿ ಅಕ್ರಮ; ಪ್ರಿಯಾಂಕ್ ಖರ್ಗೆ ವಿರುದ್ಧ ಆಧಾರರಹಿತ ಆರೋಪ ಸರಿಯಲ್ಲ : ಭೀಮಣ್ಣ ಮೇಟಿ
ಯಾದಗಿರಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದೇ ದಾಖಲೆ ಹಾಗೂ ಪುರಾವೆಗಳಿಲ್ಲದೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪ ಮಾಡುವವರು ದಾಖಲೆ ಹಾಗೂ ಪುರಾವೆಗಳನ್ನು ಇಟ್ಟುಕೊಂಡು ಮಾತನಾಡಬೇಕು. ಯಾವುದೇ ಆಧಾರವಿಲ್ಲದೆ ಸಚಿವರ ವಿರುದ್ಧ ನಿರಂತರವಾಗಿ ಆರೋಪ ಮಾಡುವುದು ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ದೂರಿದರು.
ಕೆಪಿಎಸ್‌ಸಿ ಪರೀಕ್ಷೆ ನಡೆಸುವುದು, ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸುವುದು ಹಾಗೂ ಅಂತಿಮ ಪಟ್ಟಿಯನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸುವುದು ಸೇರಿದಂತೆ ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳಿಗೆ ನಿರ್ದಿಷ್ಟ ಸಂಸ್ಥೆಗಳು ಹಾಗೂ ಅಧಿಕಾರಿಗಳು ಜವಾಬ್ದಾರರಾಗಿದ್ದಾರೆ. ಹೀಗಿರುವಾಗ ಕೆಪಿಎಸ್‌ಸಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮಕ್ಕೆ ನೇರವಾಗಿ ಸಚಿವರನ್ನು ಹೊಣೆಗಾರರನ್ನಾಗಿ ಮಾಡುವ ಪ್ರಯತ್ನ ಏಕೆ ನಡೆಯುತ್ತಿದೆ ಎಂದು ಪ್ರಶ್ನಿಸಿದರು.
ಪ್ರಿಯಾಂಕ್ ಖರ್ಗೆ ಅವರು ದಲಿತ ಸಮುದಾಯದವರಾಗಿ ಗೃಹ ಸಚಿವರಾಗಿರುವುದನ್ನು ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಯಾವುದೇ ದಾಖಲೆಗಳಿಲ್ಲದೆ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಭೀಮಣ್ಣ ಮೇಟಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಸುದರ್ಶನ ನಾಯಕ, ಮರಿಗೌಡ ಮರಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.