Yadgiri | ಜು.11 ರಂದು ರಾಷ್ಟ್ರೀಯ ಲೋಕ ಅದಾಲತ್; ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ : ನ್ಯಾ.ಮರುಳಸಿದ್ಧಾರಾಧ್ಯ
ಯಾದಗಿರಿ : ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಜುಲೈ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಜೆ.ಮರುಳಸಿದ್ದಾರಾಧ್ಯ ತಿಳಿಸಿದ್ದಾರೆ.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 19,579 ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ 1,113 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಗುರುತಿಸಲಾಗಿದೆ ಎಂದು ತಿಳಿಸಿದರು.
ಗುರುತಿಸಲಾದ ಪ್ರಕರಣಗಳ ಕಕ್ಷಿದಾರರು ಹಾಗೂ ವಕೀಲರು ಲೋಕ ಅದಾಲತ್‌ನಲ್ಲಿ ಭಾಗವಹಿಸಿ ಪರಸ್ಪರ ಸಮ್ಮತಿಯ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಹೇಳಿದರು.
ಜುಲೈ 18 ರಂದು ಚೆಕ್ ಬೌನ್ಸ್ ಪ್ರಕರಣಗಳಿಗಾಗಿ ವಿಶೇಷ ಲೋಕ ಅದಾಲತ್ (ಡ್ರೈವ್-2.0) ಹಾಗೂ ಜುಲೈ 15 ರಂದು ಮಧ್ಯಸ್ಥಿಕೆ ಕೇಂದ್ರಕ್ಕೆ ಉಲ್ಲೇಖಿಸಲಾದ ಪ್ರಕರಣಗಳ ವಿಚಾರಣೆ ನಡೆಯಲಿದೆ ಎಂದರು.
ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ 18 ಪ್ರಕರಣಗಳನ್ನು ಇತ್ಯರ್ಥಪಡಿಸಲು ಜುಲೈ 21, 22 ಮತ್ತು 23 ರಂದು ವಿಶೇಷ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಮಾತನಾಡಿ, ಜೂನ್ 21 ರಿಂದ ಜುಲೈ 10ರವರೆಗೆ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಇ-ಚಲನ್ ದಂಡ ಪಾವತಿಸುವವರಿಗೆ 50 ಶೇಕಡಾ ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು.
ಅಕ್ಟೋಬರ್ 2025ರಿಂದ ಮೇ 2026ರವರೆಗೆ 12,119 ಇ-ಚಲನ್ ಪ್ರಕರಣಗಳು ದಾಖಲಾಗಿದ್ದು, 67.91 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ 6.40 ಲಕ್ಷ ರೂ. ಮಾತ್ರ ವಸೂಲಾಗಿದ್ದು, 61.51 ಲಕ್ಷ ರೂ. ಬಾಕಿ ಉಳಿದಿದೆ ಎಂದು ವಿವರಿಸಿದರು.
ಯಾದಗಿರಿ ಸಂಚಾರಿ ಪೊಲೀಸ್ ಠಾಣೆ, ಸುಭಾಷ್ ವೃತ್ತ, ಹಳೆಯ ಮತ್ತು ಹೊಸ ಬಸ್ ನಿಲ್ದಾಣ, ಗಂಜ್ ವೃತ್ತ ಹಾಗೂ ಗಾಂಧಿ ವೃತ್ತಗಳಲ್ಲಿ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್ ಮೂಲಕವೂ ದಂಡ ಪಾವತಿಸಬಹುದಾಗಿದೆ ಎಂದು ತಿಳಿಸಿದರು.
ಮೋಟಾರು ವಾಹನ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಆರ್‌ಟಿಒ ವ್ಯಾಪ್ತಿಯಲ್ಲಿ 18.49 ಲಕ್ಷ ರೂ. ದಂಡ ಬಾಕಿಯಿದ್ದು, ಜೂನ್ 21 ರಿಂದ ಜುಲೈ 10ರವರೆಗೆ ಪಾವತಿಸುವವರಿಗೆ 50 ಶೇಕಡಾ ರಿಯಾಯಿತಿ ನೀಡಲಾಗುವುದು ಎಂದು ನ್ಯಾಯಾಧೀಶರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮರಿಯಪ್ಪ, ಆರ್‌ಟಿಒ ಮಿಲಿಂದಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.