ಯಾದಗಿರಿ: ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿರತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ಪ್ರಯಾಣ ದರವನ್ನು ಶೇ.35ರಿಂದ 40ರಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್ ರಾಜ್ಯಾಧ್ಯಕ್ಷ ಕೆ.ಆರ್. ವಿಜಯಕುಮಾರ್ ಹೇಳಿದರು.

ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗಳಲ್ಲಿ ಇಂಧನ ವೆಚ್ಚ, ಸಿಬ್ಬಂದಿಯ ವೇತನ ಸೇರಿದಂತೆ ವಿವಿಧ ನಿರ್ವಹಣಾ ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಯಾಣ ದರ ಪರಿಷ್ಕರಣೆ ಅಗತ್ಯವಾಗಿದೆ ಎಂದರು.

ಪ್ರಯಾಣಿಕರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ದರ ಪರಿಷ್ಕರಣೆ ಮಾಡಬೇಕು. ಅದೇ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಗಳು ಆರ್ಥಿಕವಾಗಿ ಸದೃಢವಾಗಿ ಕಾರ್ಯನಿರ್ವಹಿಸುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಸ್ತುತ ಪ್ರಯಾಣ ದರದಲ್ಲಿ ಶೇ.35ರಿಂದ 40ರಷ್ಟು ಹೆಚ್ಚಳ ಮಾಡುವಂತೆ ಯೂನಿಯನ್ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ‘ಅವತಾರ್’ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಮಗೆ ಬೇಕಾದ ಸ್ಥಳಕ್ಕೆ ಮುಂಗಡವಾಗಿ ಪ್ರಯಾಣದ ವ್ಯವಸ್ಥೆ ಮಾಡಿಕೊಳ್ಳುವ ಅವಕಾಶ ಕಲ್ಪಿಸುವ ಉದ್ದೇಶವಿದೆ. ಮುಂಗಡವಾಗಿ ಬುಕ್ಕಿಂಗ್ ಮಾಡುವ ಪ್ರಯಾಣಿಕರಿಗೆ ಉಚಿತವಾಗಿ ಈ ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಹೊಸ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಟಿಕೆಟ್ ಪಡೆಯುವುದು ಹಾಗೂ ಪ್ರಯಾಣವನ್ನು ಯೋಜಿಸಿಕೊಳ್ಳುವುದು ಸುಲಭವಾಗಲಿದೆ. ಪರಿಣಾಮಕಾರಿ ಹಾಗೂ ಜನಸ್ನೇಹಿ ಸೇವೆ ದೊರೆತರೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆ ಸೇವೆಯನ್ನು ಬಳಸಿಕೊಳ್ಳಲಿದ್ದು, ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆ ಇದೆ ಎಂದರು.

ಜನಸ್ನೇಹಿ ಕೆಲಸ ಮಾಡಲು ನಾವು ಹೊರಟಿದ್ದೇವೆ. ಪ್ರಯಾಣಿಕರಿಗೆ ಉತ್ತಮ, ಸುಲಭ ಹಾಗೂ ಪರಿಣಾಮಕಾರಿ ಸಾರಿಗೆ ಸೇವೆ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಾರಿಗೆ ನೌಕರರು ಹಾಗೂ ಸಂಸ್ಥೆಯ ವಿವಿಧ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಅಕ್ಟೋಬರ್ 7ರಂದು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ನೌಕರರ ಬೇಡಿಕೆಗಳನ್ನು ಸರ್ಕಾರ ಹಾಗೂ ಸಾರಿಗೆ ಆಡಳಿತ ಮಂಡಳಿ ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು. ನೌಕರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಪ್ರಯಾಣಿಕರಿಗೆ ಗುಣಮಟ್ಟದ ಸೇವೆ ನೀಡಲು ಸಂಘಟನೆ ಬದ್ಧವಾಗಿದೆ ಎಂದು ಹೇಳಿದರು.

ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್ ರಾಜ್ಯ ಪ್ರಧಾನ ಕಾರ್ಯದರ್ಶಿ ನರಹರಿಗೌಡ, ಖಾಜಾ ಅಜ್ಮೀರ್, ವೆಂಕಟ, ಕೃಷ್ಣಯ್ಯ ಗುರುಮಠಕಲ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor