Yadgiri | ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ವದ್ದು: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್
ಜಿಲ್ಲಾ ಮಟ್ಟದ ‘ಯುವ ಸಂಸತ್ತು’ ಸ್ಪರ್ಧಾ ಕಾರ್ಯಕ್ರಮ
ಯಾದಗಿರಿ: ಭಾರತವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇದರ ಯಶಸ್ಸು ಕೇವಲ ಚುನಾಯಿತ ಪ್ರತಿನಿಧಿಗಳ ಮೇಲೆ ಮಾತ್ರವಲ್ಲದೆ ಜವಾಬ್ದಾರಿಯುತ ನಾಗರಿಕರ ಮೇಲೂ ಅವಲಂಬಿತವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಯಾದಗಿರಿ ಜಿಲ್ಲಾ ಮಟ್ಟದ ‘ಯುವ ಸಂಸತ್ತು’ ಸ್ಪರ್ಧಾ ಕಾರ್ಯಕ್ರಮವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ದೇಶದ ಶಕ್ತಿ ಮತ್ತು ಭವಿಷ್ಯವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಂವಿಧಾನದ ಮೂಲ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸ್ಪರ್ಧೆಗಳಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ತಮ್ಮ ವಿಚಾರಗಳನ್ನು ಆತ್ಮವಿಶ್ವಾಸದಿಂದ ಮಂಡಿಸಬೇಕು. ಜೊತೆಗೆ ಶಿಕ್ಷಣ, ಉದ್ಯೋಗ, ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ ಹಾಗೂ ಡಿಜಿಟಲ್ ತಂತ್ರಜ್ಞಾನದ ಕುರಿತು ಯುವಜನರು ಜಾಗೃತರಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ನೋಡಲ್ ಅಧಿಕಾರಿ ಸುಜಾತಾ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಕಾರ್ಯವೈಖರಿಯನ್ನು ಪ್ರಾಯೋಗಿಕವಾಗಿ ಪರಿಚಯಿಸಲು ಯುವ ಸಂಸತ್ತು ಅತ್ಯುತ್ತಮ ವೇದಿಕೆಯಾಗಿದೆ ಎಂದರು.
ಸಂಸತ್ತಿನಲ್ಲಿ ನಡೆಯುವ ಚರ್ಚೆಗಳು, ಮಸೂದೆಗಳ ಮಂಡನೆ ಹಾಗೂ ಕಲಾಪಗಳ ಕುರಿತು ಇದರಿಂದ ಸಮಗ್ರ ಕಲ್ಪನೆ ದೊರೆಯಲಿದೆ. ಜವಾಬ್ದಾರಿಯುತ ನಾಯಕರ ನಿರ್ಮಾಣ, ಸಹಿಷ್ಣುತೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾದ ಅಭ್ಯರ್ಥಿಗಳು ಮುಂದಿನ ರಾಜ್ಯಮಟ್ಟದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಮಾಲಿಪಾಟೀಲ್, ಪ್ರಾಧ್ಯಾಪಕ ಡಾ. ಉಮೇಶ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ ಕೆಂಭಾವಿ, ಶರಣಗೌಡ ಬಿ. ಪಾಟೀಲ್, ಶಿಕ್ಷಣಾಧಿಕಾರಿ ಬಸನಗೌಡ ಪಾಟೀಲ್, ಗೌತಮ ವಳಗೇರಿ ಸೇರಿದಂತೆ ಹಲವು ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.