Yadgiri | ಜನ್ಮದಿನದಂದು ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಉಮೇಶ್ ಮುದ್ನಾಳರಿಂದ ಬೈಕ್ ರ‍್ಯಾಲಿ
ಯಾದಗಿರಿ: ಜನ್ಮದಿನದಂದು ಕೇಕ್ ಕತ್ತರಿಸಿ, ಹಾರ-ತುರಾಯಿ ಹಾಕಿಸಿಕೊಂಡು ಸಂಭ್ರಮಿಸುವ ಬದಲಾಗಿ, ರೈತರು ಹಾಗೂ ಬಡವರ ಸಮಸ್ಯೆಗಳ ಪರಿಹಾರಕ್ಕಾಗಿ ಬೃಹತ್ ಬೈಕ್ ರ‍್ಯಾಲಿ ನಡೆಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುವ ಮೂಲಕ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ವಿಭಿನ್ನವಾಗಿ ಜನ್ಮದಿನ ಆಚರಿಸಿಕೊಂಡರು.
ನಗರದಲ್ಲಿ ನಡೆದ ಬೈಕ್ ರ‍್ಯಾಲಿಯಲ್ಲಿ ಸಾವಿರಾರು ರೈತರು ಹಾಗೂ ಉಮೇಶ್ ಮುದ್ನಾಳ ಅವರ ಅಭಿಮಾನಿಗಳು ಭಾಗವಹಿಸಿದ್ದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿ, ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿದರು.
ಯಾದಗಿರಿ ಜಿಲ್ಲೆಯಲ್ಲಿ ಬರುವ ಠಾಣಗುಂದಿ, ಲಿಂಗೇರಿ, ಸೈದಾಪುರ ಹಾಗೂ ಯಾದಗಿರಿ ರೈಲ್ವೆ ನಿಲ್ದಾಣಗಳಲ್ಲಿ ಉತ್ತಮ ಆದಾಯವಿದ್ದರೂ ಅಗತ್ಯ ಮೂಲಸೌಕರ್ಯಗಳ ಕೊರತೆಯಿದೆ. ನಿಲ್ದಾಣಗಳ ಅಭಿವೃದ್ಧಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಯಾದಗಿರಿ ಜಿಲ್ಲಾ ಕೇಂದ್ರವಾಗಿ 16 ವರ್ಷ ಕಳೆದಿದ್ದರೂ ಹಲವು ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿ ಎಕ್ಸ್‌ಪ್ರೆಸ್ ರೈಲಿಗೆ ಎರಡು ಜನರಲ್ ಬೋಗಿಗಳನ್ನು ಅಳವಡಿಸಬೇಕು. ಕೃಷಿ ಕೂಲಿ ಕಾರ್ಮಿಕರು, ಬಡವರು ಹಾಗೂ ಉದ್ಯೋಗ ಅರಸಿ ಮಹಾನಗರಗಳಿಗೆ ಪ್ರಯಾಣಿಸುವ ಶ್ರಮಿಕರಿಗೆ ಅನುಕೂಲವಾಗುವಂತೆ ರೈಲ್ವೆ ಸೌಲಭ್ಯಗಳನ್ನು ಕಲ್ಪಿಸಬೇಕು. ರೈಲ್ವೆ ನಿಲ್ದಾಣಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಿ ಪ್ರಯಾಣಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ರೈತರಿಗೆ ಕಳಪೆ ಗುಣಮಟ್ಟದ ಶೇಂಗಾ ಬೀಜ ವಿತರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಕುರಿತು ತನಿಖಾ ತಂಡ ರಚಿಸಿ, ಮೊಳಕೆಯೊಡೆಯದ ಬೀಜಗಳನ್ನು ಮಾರಾಟ ಮಾಡಿದವರಿಂದ ರೈತರಿಗೆ ಹಣ ಮರುಪಾವತಿಸಲು ಕ್ರಮ ಕೈಗೊಳ್ಳಬೇಕು. ಬರಗಾಲದ ಸಂಕಷ್ಟದ ನಡುವೆಯೇ ಬೀಜಗಳು ಮೊಳಕೆಯೊಡೆಯದಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದರು.
ರೈತರ ಪಂಪ್‌ಸೆಟ್‌ಗಳಿಗೆ ಹಗಲು ವೇಳೆಯಲ್ಲಿ ನಿರಂತರ ಏಳು ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ಸುಟ್ಟ ಟ್ರಾನ್ಸ್‌ಫಾರ್ಮರ್‌ಗಳನ್ನು 24 ಗಂಟೆಗಳೊಳಗೆ ಬದಲಾಯಿಸಬೇಕು. ವಿದ್ಯುತ್ ಸಮಸ್ಯೆ ಪರಿಹಾರಕ್ಕಾಗಿ ರೈತರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಜೆಸ್ಕಾಂ ಅಧಿಕಾರಿಗಳು ಹಾಗೂ ಲೈನ್‌ಮನ್‌ಗಳ ನಿರ್ಲಕ್ಷ್ಯಕ್ಕೆ ಕಡಿವಾಣ ಹಾಕಿ, ರೈತರಿಗೆ ಸಮರ್ಪಕ ವಿದ್ಯುತ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರದಿಂದ ಪ್ರಸ್ತುತ ನೀಡಲಾಗುತ್ತಿರುವ 2,500 ರೂ. ಬರ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ಕನಿಷ್ಠ 25 ಸಾವಿರ ರೂ. ಪರಿಹಾರ ನೀಡಬೇಕು. ರೈತರು ಬ್ಯಾಂಕ್‌ಗಳಲ್ಲಿ ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ತುರ್ತಾಗಿ ಮೇವು ಬ್ಯಾಂಕ್‌ಗಳನ್ನು ತೆರೆಯಬೇಕು. ಜಿಲ್ಲೆಯಲ್ಲಿ ಭಿಕ್ಷುಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಆಶ್ರಮಗಳಲ್ಲಿ ಆಶ್ರಯ ಕಲ್ಪಿಸಿ, ಗುಣಮಟ್ಟದ ಆಹಾರ, ಚಿಕಿತ್ಸೆ ಹಾಗೂ ಸ್ವಚ್ಛ ಪರಿಸರ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಉಮೇಶ್ ಕೆ. ಮುದ್ನಾಳ ಅವರ ಅಭಿಮಾನಿಗಳ ಬಳಗದ ಸದಸ್ಯರು ಹಾಗೂ ಸಹಸ್ರಾರು ರೈತರು ಭಾಗವಹಿಸಿದ್ದರು.