ಇಂದಿನಿಂದ ಫ್ರೀಡಂ ಪಾರ್ಕ್‌ನಲ್ಲಿ ಖಾದಿ ಉತ್ಸವ
ಬೆಂಗಳೂರು, ಜ. 5: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಜ.6ರಿಂದ ಒಂದು ತಿಂಗಳ ಕಾಲ ಖಾದಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿಯ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ತಿಳಿಸಿದ್ದಾರೆ.
ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವವು ಸ್ವಾತಂತ್ರ ಉದ್ಯಾನವನದ ಪೀಪಲ್ ಪ್ಲಾಜಾದಲ್ಲಿ ನಡೆಯಲಿದ್ದು, ಸಣ್ಣ ಕೈಗಾರಿಕೆ ಸಚಿವ ಸತೀಶ್ ಜಾರಕಿಹೊಳಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ರಾಷ್ಟ್ರದ ವಿವಿಧ ರಾಜ್ಯಗಳಿಂದ ತನ್ನದೇ ಆದ ವೈಶಿಷ್ಟತೆಗಳ ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳನ್ನು ಉತ್ಪಾದಕರು ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ. ಇದಕ್ಕಾಗಿ ಸುಮಾರು 200ಕ್ಕೂ ಹೆಚ್ಚು ಮಳಿಗೆಗಳನ್ನು ನಿರ್ಮಿಸಲಾಗುತ್ತದೆ. ಈ ವಸ್ತು ಪ್ರದರ್ಶನಕ್ಕೆ ಸುಮಾರು 5ಲಕ್ಷಕ್ಕೂ ಮೇಲ್ಪಟ್ಟ ಖಾದಿ ಪ್ರಿಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಮೇಯರ್ ಬಿ.ಎನ್. ಮಂಜುನಾಥರೆಡ್ಡಿ, ಲೋಕಸಭಾ ಸದಸ್ಯ ಪಿ.ಸಿ. ಮೋಹನ್, ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಘಗಳ ಸಲಹಾ ಸಮಿತಿ ಅಧ್ಯಕ್ಷ ನಾಡೋಜ ಪಾಟೀಲ್ ಪುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.





