ರಾಜ್ಯ ಸರಕಾರದ ವೈಫಲ್ಯ ಬಿಜೆಪಿಗೆ ವರದಾನ: ನಳಿನ್

ಬಂಟ್ವಾಳ, ಜ.6: ಅಭಿವೃದ್ಧಿಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ಮುಂಬರುವ ಜಿಪಂ, ತಾಪಂ ಚುನಾವಣೆಗಳಲ್ಲಿ ಬಿಜೆಪಿಗೆ ವರದಾನವಾಗಲಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದರು. ಬುಧವಾರ ಬಿ.ಸಿ.ರೋಡ್‌ನ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಅದೇ ರೀತಿ ಜಿಪಂ, ತಾಪಂ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಒಂದೂವರೆ ವರ್ಷದಿಂದ ಕಾಂಗ್ರೆಸ್ ಸರಕಾರ ಜನರನ್ನು ಕತ್ತಲೆಯಲ್ಲಿಟ್ಟಿದೆ. ರೈತರ ಆತ್ಮಹತ್ಯೆಗಳು ಮುಂದುವರಿದರೂ ರಾಜ್ಯ ಸರಕಾರ ವೌನವಹಿಸಿದೆ. ರಬ್ಬರ್ ಬೆಳೆ ಕುಸಿತ, ಲಕ್ಷಾಂತರ ಬಿಪಿಎಲ್ ಕಾರ್ಡ್ ಗಳ ರದ್ದು ಹಾಗೂ ಅಭಿವೃದ್ಧಿಯಲ್ಲಿ ರಾಜ್ಯ ಹಿಂದುಳಿದಿರುವುದು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಯಾವುದೇ ಗೊಂದಲವಿಲ್ಲ. ಪಕ್ಷಕ್ಕಾಗಿ ದುಡಿದ ನಿಷ್ಠ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಬಿಜೆಪಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷ ಜಿ.ಆನಂದ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಸುಲೋಚನಾ ಜಿ.ಕೆ. ಭಟ್, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕಾ, ದೇವದಾಸ್ ಶೆಟ್ಟಿ, ರಾಮ್‌ದಾಸ್ ಬಂಟ್ವಾಳ ಉಪಸ್ಥಿತರಿದ್ದರು.





