ಅರ್ಜಿಗಳ ವಿಚಾರಣೆ ನಡೆಯುವಾಗ ಚುನಾವಣೆ ಘೋಷಣೆ ಸರಿಯಲ್ಲ: ಹೈಕೋರ್ಟ್
ಬೆಂಗಳೂರು, ಜ.7: ಜಿಲ್ಲಾ ಪಂಚಾಯತ್ ಚುನಾವಣೆಗೆ ಕುರಿತ ಗೊಂದಲಗಳಿಗೆ ಸಂಬಂಧಿಸಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.
ಜಿಲ್ಲಾ ಪಂಚಾಯತ್ ಚುನಾವಣೆಯ ಆವರ್ತನ ಮತ್ತು ಮೀಸಲು ನಿಗದಿ ಕುರಿತಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಅಬ್ದುಲ್ ನಝೀರ್ ಅವರಿದ್ದ ನ್ಯಾಯಪೀಠಕ್ಕೆ, ಚುನಾವಣಾ ದಿನಾಂಕ ಘೋಷಣೆಗೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಚುನಾವಣೆಗೆ ಸಂಬಂಧಿಸಿದಂತೆ ಹಲವು ಗೊಂದಲಗಳಿವೆ. ಈ ಸಂಬಂಧ ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡುವುದು ಸರಿಯಾದುದಲ್ಲ. ಅಲ್ಲದೆ, ಆಯೋಗ ಈ ಕಾರ್ಯ ಮಾಡುವುದೂ ಇಲ್ಲ ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿದೆ.
ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಅರ್ಜಿದಾರರ ವಾದವನ್ನು ಒಂದೊಂದಾಗಿ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಬಾಗಲಕೋಟೆ ತಾಲೂಕಿನ ರಾಂಪುರ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಲರಾಮ ಲಮಾಣಿ ಎಂಬುವವರು ಸೇರಿದಂತೆ ಸುಮಾರು 80ಕ್ಕೂ ಹೆಚ್ಚು ಅರ್ಜಿಗಳು ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದು, ಬಹಳಷ್ಟು ಅರ್ಜಿಗಳು ಮೀಸಲು ನಿಗದಿ ಸಂವಿಧಾನಬಾಹಿರವಾಗಿದ್ದು, ಈ ಮೀಸಲು ಸಂವಿಧಾನದ ಅನುಚ್ಛೇದ 243-ಡಿ ಗೆ ಸಂಪೂರ್ಣ ವಿರುದ್ಧವಾಗಿದೆ. ಈ ಅನುಚ್ಛೇದದ ಅನುಸಾರ ಪಂಚಾಯಿತಿಯ ಎಲ್ಲ ಕ್ಷೇತ್ರಗಳಲ್ಲೂ ಪ್ರತಿ ಐದು ವರ್ಷಕ್ಕೊಮ್ಮೆ ಆವರ್ತನ ಆಗಬೇಕು. ಆದರೆ ಆಯೋಗವು ಸಂವಿಧಾನದ ಈ ಆಶಯಕ್ಕೆ ವಿರುದ್ಧವಾಗಿ ಪ್ರತಿ 10 ವರ್ಷಕ್ಕೊಮ್ಮೆ ಆವರ್ತನ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ. ಹೀಗಾಗಿ, ಅಧಿಸೂಚನೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಕೊರಿದ್ದಾರೆ.





