ಮೆಹಬೂಬಾ ಉತ್ತರಾಧಿಕಾರಕ್ಕೆ ಬಿಜೆಪಿ ಹಸಿರು ನಿಶಾನೆ
ಶ್ರೀನಗರ: ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಮೆಹಬೂಬಾ ಮುಫ್ತಿಯವರನ್ನು ಬೆಂಬಲಿಸಲು ಬಿಜೆಪಿ ನಿರ್ಧರಿಸಿದೆ. ಆದರೆ ಮೈತ್ರಿಯಲ್ಲಿ ಅಗತ್ಯ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದೆ.
ಮೆಹಬೂಬಾ ಅವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಿಜೆಪಿ ಹಸಿರು ನಿಶಾನೆ ತೋರಿರುವುದನ್ನು ಪಕ್ಷದ ಮೂಲಗಳು ಖಚಿತಪಡಿಸಿವೆ. ಮುಫ್ತಿ ಮಹ್ಮದ್ ಸಯೀದ್ ಅವರ ನಿಧನದ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಪರ್ಯಾಯ ವಿಧಾನದಲ್ಲಿ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ವಾದವನ್ನು ಬಿಜೆಪಿ ಮುಂದಿಡಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಈ ಸ್ಪಷ್ಟನೆ ನೀಡಿದ್ದಾರೆ.
ಪಕ್ಷದ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾದ ಮೆಹಬೂಬಾ ನೇತೃತ್ವದಲ್ಲಿ ಪಿಡಿಪಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಈ ಬಗ್ಗೆ ಬಿಜೆಪಿಯ ಅಭಿಪ್ರಾಯವನ್ನು ರಾಜ್ಯಪಾಲ ಎನ್.ಎನ್.ವೋಹ್ರಾ ಕೇಳಿದ್ದಾರೆ. ಇದಕ್ಕೆ ಸಕಾರಾತ್ಮಕ ಉತ್ತರವನ್ನು ಪಕ್ಷ ನೀಡಲಿದೆ ಎಂದು ಪಕ್ಷದ ಮುಖಂಡರು ಸ್ಪಷ್ಟಪಡಿಸಿದ್ದಾರೆ.
Next Story





