ಜಲ್ಲಿಕಟ್ಟು : ತಡೆಯಾಜ್ಞೆ ತೆರವುಗೊಳಿಸಲು ಸುಪ್ರೀಂ ನಕಾರ

ಹೊಸದಿಲ್ಲಿ, ಜ.13: ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಗೆ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಇಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎನ್‌ವಿ ರಮಣ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರಕಾರ ಜಲ್ಲಿ ಕಟ್ಟು ಮತ್ತು ಎತ್ತಿನ ಗಾಡಿ ಸ್ಪರ್ಧೆಗೆ ಅವಕಾಶ ನೀಡಿ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಲು ನಿರಾಕರಿಸಿತು.
ಜಲ್ಲಿಕಟ್ಟು ಸ್ಪರ್ಧೆಗೆ ನ್ಯಾಯಾಲಯವು ಮಂಗಳವಾರ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಆಕ್ರೋಶ ವ್ಯಕ್ತವಾಗಿತ್ತು .ಮುಖ್ಯಮಂತ್ರಿ ಜಯ ಲಲಿತಾ ಕೇಂದ್ರ ಸರಕಾರಕ್ಕೆ ಪತ್ರ ಬರೆದು , ತಮಿಳುನಾಡಿನಲ್ಲಿ ಪ್ರಸಿದ್ಧವಾದ ಈ ಕ್ರೀಡೆಯನ್ನು ನಡೆಸಲು ಅನುಕೂಲವಾಗುವಂತೆ ಸುಗ್ರೀವಾಜ್ಞೆಗೆ ಒತ್ತಾಯಿಸಿದ್ದರು. ಆತ್ಮಹತ್ಯೆಗೆ ಯತ್ನ: ಜಲ್ಲಿಕಟ್ಟು ಸ್ಪರ್ಧೆಗೆ ಮತ್ತೆ ಅವಕಾಶ ನಿರಾಕರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಹಲವಡೆ ಯುವಕರು ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.





