ಲೋಕಾಯುಕ್ತಕ್ಕೆ ಶೀಘ್ರವೇ ಶಿಫಾರಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ.13: ನೂತನ ಲೋಕಾಯುಕ್ತ ನ್ಯಾಯ ಮೂರ್ತಿ ಹುದ್ದೆಗೆ ಇನ್ನೆರೆಡು ದಿನಗಳಲ್ಲಿ ರಾಜ್ಯಪಾಲರಿಗೆ ಹೆಸರನ್ನು ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ಲೋಕಾಯುಕ್ತ ನೇಮಕಾತಿ ಸಲಹಾ ಸಮಿತಿಯ ಸಭೆಯನ್ನು ನಡೆಸಿ ಈ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನೆರೆಡು ದಿನಗಳಲ್ಲಿ ರಾಜ್ಯಪಾಲರಿಗೆ ಹೆಸರನ್ನು ಕಳುಹಿಸಿಕೊಡಲಾಗುವುದು ಎಂದರು.
ಚುನಾವಣೆಗೆ ಸಿದ್ಧ: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಮುಂದೂಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡಿಲ್ಲ. ಬಿಜೆಪಿ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಚುನಾವಣೆಯ ದಿನಾಂಕ ಘೋಷಣೆಯಾಗುವುದನ್ನೇ ನಾವು ಎದುರು ನೋಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ಒಟ್ಟಿಗೆ ಬರುತ್ತಿರುವುದರಿಂದ ಪಕ್ಷದ ಮೇಲೆ ಯಾವ ಒತ್ತಡವೂ ಬೀಳುವುದಿಲ್ಲ. ವಿಧಾನಸಭೆಯ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿರುವುದರಿಂದ ಮೊದಲು ಇದಕ್ಕೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತೇವೆ. ಆನಂತರ, ಪಂಚಾಯತ್ ಚುನಾವಣೆಗಳಿಗೆ ತಯಾರಿ ನಡೆಸುತ್ತೇವೆ ಎಂದು ಅವರು ತಿಳಿಸಿದರು. ಹಾಲಿ ವಿಧಾನಪರಿಷತ್ ಸದಸ್ಯರು ವಿಧಾನಸಭೆಯ ಉಪ ಚುನಾವಣೆಗೆ ಟಿಕೆಟ್ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಬೇರೆ ಪಕ್ಷಗಳಲ್ಲಿ ಅಭ್ಯರ್ಥಿ ಗಳೇ ಇಲ್ಲ. ನಾಮಪತ್ರ ಸಲ್ಲಿಕೆಗೆ ಜ.26ರವರೆಗೆ ಅವಕಾಶವಿರುವುದರಿಂದ ಪ್ರಮುಖ ನಾಯಕರೊಂದಿಗೆ ಚರ್ಚಿಸಿ ಶೀಘ್ರವೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು ಎಂದರು.
ಪರಮೇಶ್ವರ್‌ಗೆ ಜಿಲ್ಲಾ ಉಸ್ತುವಾರಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ಚರ್ಚೆ ನಡೆಸಿ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನು ವಹಿಸಲಾಗಿದೆ. ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಅಭಯಚಂದ್ರ ಜೈನ್ ತಮಗೆ ಜಿಲ್ಲಾ ಉಸ್ತುವಾರಿಯ ಹೊಣೆಗಾರಿಕೆ ಬೇಡ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಿಗಮ-ಮಂಡಳಿ ನೇಮಕ: ನಿಗಮ, ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರ ನೇಮಕ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಎಸ್.ಟಿ.ಸೋಮಶೇಖರ್ ಬರೆದಿರುವ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಸಂಬಂಧ ನಾನು ಹಾಗೂ ಕೆಪಿಸಿಸಿ ಅಧ್ಯಕ್ಷರು ಸೋಮಶೇಖರ್ ಜೊತೆ ಮಾತನಾಡಿದ್ದು, ಶೀಘ್ರವೇ ನಿಗಮ, ಮಂಡಳಿಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸುತ್ತೇವೆ ಎಂದರು.







