ಸಿದ್ದರಾಮಯ್ಯ ಸರ್ವಾಧಿಕಾರಿ: ಯಡಿಯೂರಪ್ಪ ಟೀಕೆ

ಬೆಂಗಳೂರು, ಜ. 15: ಕೇಂದ್ರ ಸರಕಾರ ಕರ್ನಾಟಕದಲ್ಲಿನ ಬರ ಪರಿಸ್ಥಿತಿಗೆ 1,540 ಕೋಟಿ ರೂ. ನೆರವು ನೀಡಿದ್ದರೂ, ರಾಜ್ಯ ಸರಕಾರ ಅದನ್ನು ರೈತರಿಗೆ ತಲುಪಿಸುವ ಕೆಲಸ ಮಾಡುತ್ತಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಶುಕ್ರವಾರ ಇಲ್ಲಿನ ಭಾರತೀಯ ವಿದ್ಯಾಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಾವಿರ ರೈತರು ಆತ್ಮಹತ್ಯೆಗೆ ಶರಣಾಗಿದ್ದರೂ, ರೈತ ಕುಟುಂಬಗಳಿಗೆ ಅಗತ್ಯ ಪರಿಹಾರವನ್ನೇ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಶ್ವೇತಪತ್ರಕ್ಕೆ ಆಗ್ರಹ: ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ ಕೂಡಲೇ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಆಗ್ರಹಿಸಿದ ಬಿಎಸ್‌ವೈ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತವಾಗಿವೆ ಎಂದು ಟೀಕಿಸಿದರು.
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮತ್ತು ಮೂರು ಕ್ಷೇತ್ರಗಳ ಉಪ ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಇನ್ನೂ ಎರಡು ತಿಂಗಳುಗಳ ಕಾಲ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುವುದಿಲ್ಲ. ಹೀಗಾದರೆ ಬಜೆಟ್‌ನಲ್ಲಿ ಘೋಷಿಸಿದ ಹಣವನ್ನು ಖರ್ಚು ಮಾಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.
ಎಚ್ಚೆತ್ತುಕೊಳ್ಳಲಿ: ರಾಜ್ಯದಲ್ಲಿ ಬರ- ಸಾಲಬಾಧೆ ಹಿನ್ನೆಲೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಈಗಲಾದರೂ ರಾಜ್ಯ ಸರಕಾರ ಕುಂಭಕರ್ಣ ನಿದ್ದೆಯಿಂದ ಎಚ್ಚತ್ತುಕೊಳ್ಳಬೇಕಿದೆ ಎಂದು ಆಗ್ರಹಿಸಿದ ಅವರು, ಬರ ಪೀಡಿತ ಪ್ರದೇಶ ಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲಿ ಎಂದು ಯಡಿಯೂರಪ್ಪ ಸಲಹೆ ನೀಡಿದರು.





