ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ
ಮಂಗಳೂರು: ದ.ಕ. ವಿಧಾನ ಪರಿಷತ್‌ಗೆ ನಡೆದ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಪ್ರತಾಪ್ ಚಂದ್ರ ಶೆಟ್ಟಿ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವನ್ನು ಜ.23ರಂದು ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ 11ಕ್ಕೆ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಸಾಕಷ್ಟು ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಉಡುಪಿ ಹಾಗೂ ದ.ಕ. ಜಿಲ್ಲೆಯ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸುವ ಮೂಲಕ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಿದೆ. ಇದರ ಜತೆಯಲ್ಲೇ ಸರಕಾರ ಜಾರಿಗೆ ತಂದ ಜನಪರ ಯೋಜನೆಗಳು ಕೂಡಾ ನೆರವಾಗಿದೆ ಎಂದರು.
ಇ ಸ್ವತ್ತಿನಿಂದ ವಿನಾಯಿತಿ: ಮನೆ, ವಸತಿ ನಿವೇಶನಗಳ ಖರೀದಿ ಮಾರಾಟದ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ಗಳಿಂದ ನಮೂನೆ 9 ಮತ್ತು 11ಅನ್ನು ಕಡ್ಡಾಯವಾಗಿ ಪಡೆಯಬೇಕಾದ ಇ ಸ್ವತ್ತು ನಿಯಮಗಳ ವ್ಯಾಪ್ತಿಯಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ವಿನಾಯಿತಿ ನೀಡಿರುವುದಾಗಿ ಸಚಿವ ರೈ ಈ ಸಂದರ್ಭ ತಿಳಿಸಿದರು.





