ಗುಣಮಟ್ಟ ಶಿಕ್ಷಣದತ್ತ ಕಾಳಜಿ ವಹಿಸಲು ಮುಹಮ್ಮದ್ ಬ್ಯಾರಿ ಕರೆ
ಮಂಗಳೂರು: ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಕಾಳಜಿ ವಹಿಸಬೇಕಾದ ಅಗತ್ಯವಿದೆ ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಎಜುಕೇಶನಲ್ ಇನ್‌ಸ್ಟಿಟ್ಯೂಟ್ಸ್ ಫೆಡರೇಶನ್‌ನ ಅಧ್ಯಕ್ಷ ಮುಹಮ್ಮದ್ ಬ್ಯಾರಿ ಎಡಪದವು ಕರೆ ನೀಡಿದ್ದಾರೆ.
ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ‘ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರೊಂದಿಗಿನ ಸ್ನೇಹ ಸಮ್ಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಇಂದಿನ ಶಿಕ್ಷಣದ ಗುಣಮಟ್ಟ ಹಾಗೂ ಹಿಂದಿನ ಕಾಲದಲ್ಲಿದ್ದ ಶಿಕ್ಷಣದ ಗುಣಮಟ್ಟದಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಹಿಂದೆ ಒಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಯ ದೃಷ್ಟಿಯಿಂದ ಶಿಕ್ಷಣ ನೀಡುವವರು ಗಮನ ಹರಿಸುತ್ತಿದ್ದರು. ಆ ಕಾರಣದಿಂದ ಅವರಲ್ಲಿ ಹಲವು ವೌಲ್ಯಗಳು ಶಿಕ್ಷಣದಲ್ಲಿ ಒಳಗೊಂಡಿತ್ತು. ಈ ನಿಟ್ಟಿನಲ್ಲಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲದೆ, ರಾಜ್ಯದಲ್ಲಿರುವ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಗುಣಮಟ್ಟದ ಬಗ್ಗೆ ಗಾಢವಾಗಿ ಚಿಂತಿಸಬೇಕಾದ ಅಗತ್ಯವಿದೆ ಎಂದರು.
ಪ್ರಸಕ್ತ ಶಿಕ್ಷಣ ಎಂಬುದು ಕೇವಲ ವಿದ್ಯಾರ್ಥಿಗಳು ರ್ಯಾಂಕ್ ಗಳಿಕೆಗೆ ಹಾಗೂ ಶಾಲಾ ಆಡಳಿತ ಮಂಡಳಿಗಳು ಶೇ.100 ಫಲಿತಾಂಶ ಪಡೆಯಲಿಕ್ಕೆ ಸೀಮಿತಗೊಳ್ಳುತ್ತಿರುವುದು ವಿಷಾದನೀಯ. ರಾಜ್ಯದ ಅನೇಕ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳು ಹಲವು ರೀತಿಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿವೆ. ಇಂತಹ ಸಮಸ್ಯೆಗಳನ್ನು ಪರಿಹರಿಸುವುದರೊಂದಿಗೆ ಶಿಕ್ಷಣದಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಅಳವಡಿಸಿಕೊಳ್ಳುವ ಬಗ್ಗೆ ಚಿಂತಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮೈನಾರಿಟಿ ಗೈಡೆನ್ಸ್ ಫೋರಂನ ಪ್ರಧಾನ ಕಾರ್ಯದರ್ಶಿ ನಿಸಾರ್ ಮುಹಮ್ಮದ್, ಕಾರ್ಯಕ್ರಮದ ಸಂಚಾಲಕ ಮುಹಮ್ಮದ್ ಯು.ಬಿ. ಉಪಸ್ಥಿತರಿದ್ದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.







