ಯಾವ ಪಕ್ಷದೊಂದಿಗೂ ಹೊಂದಾಣಿಕೆಯಿಲ್ಲ: ಕುಮಾರಸ್ವಾಮಿ

ಹುಬ್ಬಳ್ಳಿ: ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳದೆ ಜೆಡಿಎಸ್ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ನಿದ್ದೆಯಿಂದ ಎದ್ದು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ತೆರಿಗೆ ಸಂಗ್ರಹ ಹಾಗೂ ವಿದ್ಯುತ್ ಪರಿಸ್ಥಿತಿ ಸುಧಾರಣೆಯಲ್ಲ ಸರಕಾರ ಸಂಪೂರ್ಣ ವಿಫಲಾಗಿದೆ ಎಂದು ಅವರು ಟೀಕಿಸಿದರು.
ರಾಜ್ಯದೆಲ್ಲೆಡೆ ಮತ್ತಷ್ಟು ಹೊಸ ಹೊಸ ಕಾಮಗಾರಿಗಳಿಗೆ ಗುದ್ದಲಿ ಪೂಜೆಗಳನ್ನು ಮಾಡುವ ಅಗತ್ಯವಿರುವುದರಿಂದ ಪಂಚಾಯತ್ ಚುನಾವಣೆಯನ್ನು ಮುಂದೂಡುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ. ಮುಖ್ಯಮಂತ್ರಿಗೆ ಅಧಿಕಾರಿಗಳ ಜೊತೆ ಯಾವ ರೀತಿಯಲ್ಲಿ ವ್ಯವಹರಿಸಬೇಕು ಎಂಬ ಪರಿಜ್ಞಾನವಿಲ್ಲ ಎಂದು ಅವರು ಕಿಡಿಗಾರಿದರು.
ಕೃಷಿ ಸಚಿವ ಕೃಷ್ಣಭೈರೇಗೌಡ ವಿದೇಶಾಂಗ ಸಚಿವರಾಗಿ ಬಿಟ್ಟಿದ್ದಾರೆ. ರೈತರ ಸಮಸ್ಯೆಗಳು ಅವರ ಗಮನಕ್ಕೆ ಬರುವುದಿಲ್ಲ. ಅಂತಾರಾಷ್ಟ್ರೀಯ ಮಟ್ಟದ ಖಾತೆಯನ್ನು ನೀಡಿ ಅವರಿಗೆ ವಿದೇಶಕ್ಕೆ ಕಳುಹಿಸಿಕೊಡಬೇಕು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.





