ರೋಹಿತ್ ಆತ್ಮಹತ್ಯೆ ಪ್ರಕರಣ; ದಲಿತ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಹಲ್ಲೆ: ಆರೋಪ

ಬೆಂಗಳೂರು, ಜ. 21: ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ವಿದ್ಯಾರ್ಥಿ ಗಳ ಮೇಲೆ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಎನ್‌ಎಸ್‌ಯುಐ ಮುಖಂಡ ಮಂಜು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನಾನಿರತ ದಲಿತ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಲ್ಲದೆ ಅವರ ಬಟ್ಟೆಗಳನ್ನು ಅವರೇ ಹರಿದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ಪ್ರತಿಭಟನೆ ನಡೆಸುತ್ತಿದ್ದ ದಲಿತ ವಿದ್ಯಾರ್ಥಿಗಳ ನೆರವಿಗೆ ಎನ್‌ಎಸ್‌ಯುಐ ಕಾರ್ಯಕರ್ತರು ತೆರಳಿದ್ದು, ಇದೀಗ ಅವರ ವಿರುದ್ಧವೇ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದರು.
ಇದೇ ವೇಳೆ ಸಂಶೋಧನಾ ವಿದ್ಯಾರ್ಥಿ ರೋಹಿತ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಆಕ್ರೋಶಿತ ದಲಿತ ಯುವಕರ ಗುಂಪೊಂದು ಇಲ್ಲಿನ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಎಬಿವಿಪಿ ಕಚೇರಿಯ ಕಿಟಕಿ ಗಾಜುಗಳಿಗೆ ಕಲ್ಲು ತೂರಾಟ ನಡೆಸಿದೆ ಎಂದು ಎಬಿವಿಪಿ ಆರೋಪಿಸಿದೆ.
ಈ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ಸಂಭವಿಸಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ಕಚೇರಿಯ ಕಿಟಕಿಗಳ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳನ್ನು ಪುಡಿಗೈದಿದ್ದಾರೆ ಎನ್ನಲಾಗಿದೆ.
ದೂರು-ಪ್ರತಿದೂರು: ಎಬಿವಿಪಿ ಕಾರ್ಯಕರ್ತರು ಪ್ರತಿಭಟನಾನಿರತರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಶೇಷಾದ್ರಿಪುರಂ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಎಬಿವಿಪಿ ಕಾರ್ಯಕರ್ತರು ಪ್ರತಿದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಇಲ್ಲಿನ ಶೇಷಾದ್ರಿಪುರಂ ಠಾಣೆ ಪೊಲೀಸರು ದೂರು-ಪ್ರತಿದೂರು ದಾಖಲು ಮಾಡಿಕೊಂಡಿದ್ದು, ಉಭಯ ಸಂಘಟನೆಗಳ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.





