ಮಹಿಳೆಯರ ಮೇಲೆ ದೌರ್ಜನ್ಯ ಸೂಕ್ತಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಪುತ್ತೂರು, ಜ.22: ಪುತ್ತೂರು ತಾಲೂಕಿನಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಇನ್ನು ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರಿನ ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರಿನ ಮಿನಿ ವಿಧಾನಸೌಧಕ್ಕೆ ಶುಕ್ರವಾರ ಆಗಮಿಸಿದ ಜಿಲ್ಲಾಧಿಕಾರಿ ಇಬ್ರಾಹೀಂರನ್ನು ಪುತ್ತೂರಿನ ಮಹಿಳಾ ಸಮರ್ಪಣಾ ವೇದಿಕೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇನ್ನಿತರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಭೇಟಿ ಯಾಗಿ ಮನವಿ ಸಲ್ಲಿಸಿದ್ದಾರೆ. ತಾಲೂಕಿನಲ್ಲಿ ಮಹಿಳಾ ಶಿಕ್ಷಕಿಯರು, ಮಹಿಳಾ ಜನಪ್ರತಿನಿಧಿಗಳು, ಪುತ್ತೂರು ನಗರಸಭಾ ಆಯುಕ್ತರು ಸೇರಿದಂತೆ ಮಹಿಳಾ ಅಧಿಕಾರಿಗಳ ವಿರುದ್ಧ ಮಾನಸಿಕ ದೌರ್ಜನ್ಯಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದೆ. ಇದರಿಂದಾಗಿ ನೊಂದ ಮಹಿಳೆಯರು ಮನೆಯಿಂದ ಹೊರಬರಲಾಗದ ಪರಿಸ್ಥಿತಿ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಈ ಸಂದರ್ಭ ನಯನಾ ರೈ, ರೊಹರಾ ನಿಸಾರ್ ಅಹ್ಮದ್, ಶಾರದಾ ಅರಸ್, ಶಾರದಾ ಕೇಶವ್, ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.





