ಇಂದಿನಿಂದ ಚುನಾವಣಾ ಪ್ರಚಾರ ಕಾರ್ಯ: ಪರಮೇಶ್ವರ್
ಬೆಂಗಳೂರು,ಜ.30: ಹೆಬ್ಬಾಳ, ಬೀದರ್ ಹಾಗೂ ದೇವದುರ್ಗ ಕ್ಷೇತ್ರಗಳ ಉಪ ಚುನಾವಣೆಗಳನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಚುನಾವಣಾ ಪ್ರಚಾರ ಕಾರ್ಯಕ್ಕೆ ನಾಳೆ(ಜ.31)ಯಿಂದ ಚಾಲನೆ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಹುತಾತ್ಮ ದಿನಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೂರು ಕ್ಷೇತ್ರಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮೂರು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಆ ಹಿನ್ನೆಲೆಯಲ್ಲಿ ತಮ್ಮದೇ ಆದ ಕಾರ್ಯತಂತ್ರದಲ್ಲಿ ಕೆಲಸ ಮಾಡುತ್ತೇವೆ ಎಂದರು.
ಪ್ರಣಾಳಿಕೆ ಬಿಡುಗಡೆ: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಸಿದ್ಧವಾಗಿದ್ದು, ಇನ್ನೆರಡು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದ ಅವರು, ಕಾಂಗ್ರೆಸ್ ಯಾವುದೇ ಸಂದರ್ಭ ದಲ್ಲಿಯೂ ಜಾತಿ ಆಧಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಬದಲಿಗೆ ಜಾತ್ಯತೀತ ತತ್ವದಲ್ಲಿ ನಂಬಿಕೆಯಿಟ್ಟಿದೆ ಎಂದರು.
ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಜೊತೆಗೆ ತೆಗೆದುಕೊಂಡು ಹೋಗಿ ಸಾಮಾಜಿಕ ನ್ಯಾಯ ಪರಿಪಾಲನೆ ಕಲ್ಪನೆಯಲ್ಲಿ ಪಕ್ಷ ಕೆಲಸ ಮಾಡುತ್ತದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪರಮೇಶ್ವರ್ ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ರಾದ ಎಚ್.ಹನುಮಂತಪ್ಪ, ಎನ್. ಎಸ್. ಬೋಸರಾಜ್, ಹುಸೇನ್, ಮಾಜಿ ಸಂಸದೆ ಪ್ರಿಯಾ ದತ್ತ್ ಸೇರಿದಂತೆ ಮತ್ತಿತರರು ಹಾಜರಿದ್ದರು.





