ಕಸಾಪ: ಅಧ್ಯಕ್ಷ ಸ್ಥಾನಕ್ಕೆ 14 ಅಭ್ಯರ್ಥಿಗಳು ಕಣದಲ್ಲಿ

ಬೆಂಗಳೂರು, ಫೆ.6: ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಚುನಾವಣೆಗೆ ಎಲ್ಲ ಸಿದ್ಧತೆ ಮುಗಿದಿದ್ದು ರಾಜ್ಯದಾದ್ಯಂತ 35 ಅಧ್ಯಕ್ಷ ಸ್ಥಾನಗಳಿಗೆ ಫೆ.28 ರಂದು ಬೆ.8ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾಧಿಕಾರಿ ಕೆ. ನಾಗರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಎಲ್ಲ ತಾಲೂಕು ಮತ್ತು ಕೆಲವು ಹೋಬಳಿ ಕೇಂದ್ರಗಳು ಸೇರಿದಂತೆ 262 ಮತಗಟ್ಟೆಗಳನ್ನು ತೆರೆಯಲಾಗಿದೆ. ಈ ಚುನಾವಣೆಯಲ್ಲಿ 1,89,355 ಜನ ಸದಸ್ಯರು ತಮ್ಮ ಮತ ಚಲಾಯಿಸುವ ಮೂಲಕ 35 ಜನರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಹಾಗೂ ಚುನಾವಣೆಯ ದಿನವೇ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ಬಾರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಂಧ್ರಪ್ರದೇಶ ಗಡಿ ರಾಜ್ಯ ಘಟಕ ಸ್ಥಾನಕ್ಕೆ 3 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು, ಕೇರಳ, ತಮಿಳುನಾಡು ಹಾಗೂ ಮಹಾರಾಷ್ಟ್ರ ಗಡಿ ರಾಜ್ಯ ಘಟಕ ಸ್ಥಾನಕ್ಕೆ ತಲಾ ಒಬ್ಬ ಅಭ್ಯರ್ಥಿ ಮಾತ್ರ ಅಂತಿಮ ಕಣದಲ್ಲಿದ್ದಾರೆ. ಇನ್ನುಳಿದಂತೆ 3 ಗಡಿ ರಾಜ್ಯ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದ 30 ಜಿಲ್ಲೆಗಳಿಂದ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ 125 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬ ಅಭ್ಯರ್ಥಿ ಮಾತ್ರ ಕಣದಲ್ಲಿರುವುದರಿಂದ ಈ ಎರಡೂ ಜಿಲ್ಲೆಗಳಲ್ಲಿ ಚುನಾವಣೆ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ ಕೇಂದ್ರಗಳಲ್ಲಿ, ತಾಲೂಕು ಕಚೇರಿಗಳಲ್ಲಿ ಜಿಲ್ಲಾ ಕಸಪಾ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಉಳಿದಂತೆ ಫೆ. 5 ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಸ್ಥಾನಕ್ಕೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಸಭೆಯನ್ನು ನಡೆಸಿ ಚುನಾವಣೆಯ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







