ಹೆಬ್ಬಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ರಾಮಲಿಂಗಾರೆಡ್ಡಿ
ಬೆಂಗಳೂರು, ಫೆ.6: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೆಹ್ಮಾನ್ ಶರೀಫ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ವ್ಯಕ್ತಪಡಿಸಿದ್ದಾರೆ.
ಶನಿವಾರ ಹೆಬ್ಬಾಳ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆ.ಸಿ.ನಗರ, ರೆಹ್ಮತ್‌ನಗರ ಪ್ರದೇಶದಲ್ಲಿ ಇಂದು ಪ್ರಚಾರ ಮಾಡಿದ್ದೇವೆ. ಎಲ್ಲ ನಾಯಕರು ವಾರ್ಡ್ ಮಟ್ಟದಲ್ಲಿ ಮನೆ, ಮನೆಗೆ ತೆರಳಿ ಪ್ರಚಾರ ಮಾಡುತ್ತಾರೆ ಎಂದರು.ುನಾವಣಾ ಪ್ರಚಾರಕ್ಕೆ ಇನ್ನು ಒಂದು ವಾರ ಸಮಯವಿದೆ. ಫೆ.9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಪ್ರಚಾರಕ್ಕೆ ಬರುತ್ತಾರೆ. ಹಿರಿಯ ನಾಯಕರಾದ ಎಸ್.ಎಂ.ಕೃಷ್ಣ, ಮಲ್ಲಿಕಾರ್ಜುನ ಖರ್ಗೆ ಫೆ.10ರಂದು ಪ್ರಚಾರ ನಡೆಸಲಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ನನ್ನ ನಡುವೆ ಯಾವುದೇ ಮನಸ್ತಾಪವಿಲ್ಲ. ಅವರು ಬೆಂಗಳೂರು ಉಸ್ತುವಾರಿ ಸಚಿವರು, ನಾನು ಕೋಲಾರ ಉಸ್ತುವಾರಿಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಅವರ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಿದರೆ ಮಾತ್ರ ನಮ್ಮ ನಡುವೆ ವ್ಯತ್ಯಾಸ ಬರಲು ಸಾಧ್ಯ ಎಂದು ಅವರು ತಿಳಿಸಿದರು.





