ನೂತನ ಲೋಕಾಯುಕ್ತ ನ್ಯಾ.ಎಸ್.ಆರ್.ನಾಯಕ್?

ಬೆಂಗಳೂರು, ಫೆ. 19: ನೂತನ ಲೋಕಾಯುಕ್ತ ಸ್ಥಾನಕ್ಕೆ ರಾಜ್ಯ ಕಾನೂನು ಆಯೋಗದ ಅಧ್ಯಕ್ಷರಾಗಿರುವ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಶುಕ್ರವಾರ ಇಲ್ಲಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ನೂತನ ಲೋಕಾಯುಕ್ತರ ನೇಮಕ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್, ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ನೂತನ ಲೋಕಾಯುಕ್ತ ಸ್ಥಾನಕ್ಕೆ ನಿಯೋಜಿಸುವ ಸಂಬಂಧ ಹೆಸರು ಶಿಫಾರಸ್ಸು ಮಾಡಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್.ಈಶ್ವರಪ್ಪ ಅವರು ನ್ಯಾ.ವಿಕ್ರಂಜೀತ್ ಸೇನ್ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದು, ಅವರ ಹೆಸರನ್ನೇ ಲೋಕಾಯುಕ್ತ ಸ್ಥಾನಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.
ನೂತನ ಲೋಕಾಯುಕ್ತ ಸ್ಥಾನಕ್ಕೆ ಯಾರ ಹೆಸರನ್ನು ಶಿಫಾರಸು ಮಾಡಬೇಕೆಂಬುದು ಸಿಎಂ ಸಿದ್ಧರಾಮಯ್ಯನವರ ವಿವೇಚನೆಗೆ ಬಿಟ್ಟಿದ್ದು, ಶೀಘ್ರದಲ್ಲೆ ಹೆಸರನ್ನು ಅಂತಿಮ ಗೊಳಿಸಿ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
ಈ ಮಧ್ಯೆ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ನೂತನ ಲೋಕಾಯುಕ್ತ ಸ್ಥಾನಕ್ಕೆ ಅರ್ಹ ನ್ಯಾಯಮೂರ್ತಿ ನೇಮಕ ಸಂಬಂಧ ಸಭೆ ನಡೆಸಿದ್ದು, ವಿಪಕ್ಷ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಈ ವಿಚಾರ ಸಂಬಂಧ ಯಾವುದೇ ಗೊಂದಲವಿಲ್ಲ. ಶೀಘ್ರದಲ್ಲೆ ನೂತನ ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗುವುದು ಎಂದು ನುಡಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ನೂತನ ಲೋಕಾಯುಕ್ತರ ಆಯ್ಕೆ ಸಂಬಂಧದ ಸಭೆಯಲ್ಲಿ ನ್ಯಾಯಮೂರ್ತಿ ವಿಕ್ರಂ ಜೀತ್ ಸೇನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವಂತೆ ಸೂಚಿಸಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ನ್ಯಾ.ಎಸ್.ಆರ್.ನಾಯಕ್ ಪರ ಒಲವು ಹೊಂದಿದ್ದಾರೆ. ಅಂತಿಮ ತೀರ್ಮಾನ ಕೈಗೊಳ್ಳಲು ಅಧಿಕಾರ ಅವರು ಹೊಂದಿದ್ದಾರೆ ಎಂದು ಹೇಳಿದರು.
ರಾಜ್ಯ ಕಾನೂನು ಆಯೋಗದ ಅಧ್ಯಕ್ಷರಾಗಿರುವ ನ್ಯಾ.ಎಸ್.ಆರ್. ನಾಯಕ್ ಅವರ ಹೆಸರನ್ನು ನೂತನ ಲೋಕಾಯುಕ್ತ ಸ್ಥಾನಕ್ಕೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ತೀರ್ಮಾನಿಸಿದ್ದು, ಶೀಘ್ರದಲ್ಲೇ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಿದ್ದಾರೆಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.
ವಿಪಕ್ಷಗಳ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಈಶ್ವರಪ್ಪ ಭಾಗಿಯಾಗಿ ನ್ಯಾ.ವಿಕ್ರಂಜಿತ್ ಹೆಸರನ್ನು ಸೂಚಿಸಿದ್ದರು. ಆದರೆ ಎಸ್.ಆರ್.ನಾಯಕ್‌ಗೆ ಪತ್ರದ ಮೂಲಕ ಬೆಂಬಲ ವ್ಯಕ್ತಪಡಿಸಿರುವ ಸ್ಪೀಕರ್ ಕಾಗೋಡು ತಿಮ್ಮಪ್ಪ ಹಾಗೂ ವಿಕ್ರಂಜಿತ್ ಸೇನ್ ಹೆಸರನ್ನು ಶಿಾರಸು ಮಾಡಿ ಪತ್ರ ಬರೆದಿರುವ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ನ್ಯಾ.ಎಸ್.ಆರ್.ನಾಯಕ್ ಹೆಸರು ಪ್ರಸ್ತಾಪಿಸುವ ಮೂಲಕ ನಾಯಕ್ ಪರ ತಮ್ಮ ಮನದಾಳದ ಇಂಗಿತ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.





