ಫಸಲ್ ವಿಮಾ ಯೋಜನೆ ಜಾರಿ: ಮುಖ್ಯಮಂತ್ರಿಯ ಆಹ್ವಾನಿಸದೆ ಪ್ರಧಾನಿಯಿಂದ ಶಿಷ್ಟಾಚಾರ ಉಲ್ಲಂಘನೆ

ಕಾಂಗ್ರೆಸ್ ಆರೋಪ
ಬೆಂಗಳೂರು, ಫೆ. 28: ಪ್ರಧಾನಿ ಮೋದಿಯವರಿಗೆ ಕನಿಷ್ಠ ಬದ್ಧತೆಯಿದ್ದರೆ ಕಳಸಾ- ಬಂಡೂರಿ ನಾಲಾ ಸಮಸ್ಯೆ ಇತ್ಯರ್ಥಪಡಿಸಬೇಕು. ಬರ ಪರಿಹಾರಕ್ಕೆ 3,800ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಿ, ರೈತರ ಆತ್ಮಹತ್ಯೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.
ರವಿವಾರ ಇಲ್ಲಿನ ಖಾಸಗಿ ಹೊಟೇಲ್‌ವೊಂದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಸವರಾಜ ರಾಯರೆಡ್ಡಿ, ಎಚ್.ಎಂ.ರೇವಣ್ಣ, ವಿ.ಎಸ್.ಉಗ್ರಪ್ಪ, ಅಶೋಕ್ ಪಟ್ಟಣ್, ಎಂ.ಟಿ.ಬಿ.ನಾಗರಾಜ್ ಸೇರಿದಂತೆ ಹಲವು ಮುಖಂಡರು, ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಶಿಷ್ಟಾಚಾರದ ಉಲ್ಲಂಘನೆ ಆರೋಪ: ಕೇಂದ್ರ ರೈತರಿಗಾಗಿ ಜಾರಿಗೆ ತಂದಿರುವ ‘ಫಸಲ್ ಭೀಮಾ’ ವಿಮಾ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ ಉಗ್ರಪ್ಪ, ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನ ಮಾಡುತ್ತಿರುವ ಯೋಜನೆ. ಈ ಯೋಜನೆಗೆ ರಾಜ್ಯ ಸರಕಾರವೂ ಅನುದಾನವನ್ನು ನೀಡುತ್ತದೆ. ಆದರೆ, ಪ್ರಧಾನಿ ಮೋದಿ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಆಹ್ವಾನಿಸದಿರುವುದು ಕರ್ನಾಟಕದ ಜನತೆಗೆ ಮಾಡಿದ ಅಪಮಾನ ಎಂದು ವಾಗ್ದಾಳಿ ನಡೆಸಿದರು.







