ಬೆಳ್ತಂಗಡಿ: ಜನಸಾಮಾನ್ಯರಿಗೆ ಕಾನೂನಿನ ಅರಿವು ಇರಬೇಕಾದ್ದು ಅತೀ ಮುಖ್ಯ - ಜೆಎಂಎಫ್‌ಸಿ ನ್ಯಾಯಾಧೀಶ ರಾಘವೇಂದ್ರ ಜಿ
.jpg)
ಬೆಳ್ತಂಗಡಿ: ಜನಸಾಮಾನ್ಯರಿಗೆ ಕಾನೂನಿನ ಅರಿವು ಇರಬೇಕಾದ್ದು ಅತೀ ಮುಖ್ಯ. ಆ ನಿಟ್ಟಿನಲ್ಲಿ ಪ್ರತೀ ವರ್ಷ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜನಸಾಮಾನ್ಯರು ಸಾಕ್ಷರತಾ ರಥದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ರಾಘವೇಂದ್ರ ಜಿ. ಹೇಳಿದರು.
ಅವರು ಮಂಗಳವಾರ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧೀಕಾರ, ಕಾನೂನು ಸೇವೆಗಳ ಸಮಿತಿ, ವಕೀಲ ಸಂಘ ಬೆಳ್ತಂಗಡಿ ಹಾಗೂ ಸರಕಾರಿ ಇಲಾಖೆಗಳ ಆಶ್ರಯದಲ್ಲಿ ಕಾನೂನು ಸಾಕ್ಷರತಾ ರಥವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಅರುಣ ಕುಮಾರ್ ಮಾತನಾಡಿ, ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ ಮೂಲಕ ಜಿಲ್ಲೆಯ ಸಂಚಾರಿ ರಥದ ಉದ್ಘಾಟನೆ ನಡೆಯುತ್ತಿದೆ ಎಂದರು.
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಸರಕಾರಿ ಅಭಿಯೋಜಕ ಕಿರಣ್ ಕುಮಾರ್ ಜೆ.ಕೆ., ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸೂರ್ಯನಾರಾಯಣ ಭಟ್, ವಲಯ ಅರಣ್ಯಾಧಿಕಾರಿ ಸುಂದರ ಶೆಟ್ಟಿ, ಅಬಕಾರಿ ನಿರೀಕ್ಷಕಿ ಸೌಮ್ಯಲತಾ, ವಕೀಲರ ಸಂಘದ ಕಾರ್ಯದರ್ಶಿ ಶಿವಯ್ಯ ಇದ್ದರು.





