ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಕಿತ್ತೂರುರಾಣಿ ಚೆನ್ನಮ್ಮ ಪ್ರಶಸ್ತಿ ಸಮಾರಂಭ

ಬೆಂಗಳೂರು, ಮಾ.8: ರಾಜ್ಯದಲ್ಲಿನ ಮಹಿಳೆಯರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ಮಹಿಳಾ ಬಜೆಟ್ ಮಂಡನೆಗೆ ಚಿಂತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರನ್ನು ಸಶಕ್ತಗೊಳಿಸಲು ಸ್ತ್ರೀ ಶಕ್ತಿ ಗುಂಪುಗಳನ್ನು ಹಂತ ಹಂತವಾಗಿ ಹೆಚ್ಚಿಸಿ, ಸ್ತ್ರೀ ಶಕ್ತಿ ಸಂಘಗಳಿಗಾಗಿ ವಿಭಾಗೀಯವಾರು ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಗುಂಪುಗಳು ತಯಾರಿಸುವ ಪದಾರ್ಥಗಳನ್ನು ಮಾರಾಟ ಮಾಡಲು ತಾಲೂಕು ಮಟ್ಟದಲ್ಲಿ ಮಾರಾಟ ಕೇಂದ್ರಗಳನ್ನು ತೆರೆಯಲಾಗುವುದು. ಸ್ತ್ರೀ ಶಕ್ತಿ ಸಂಘಟನೆಗಳ ವ್ಯವಹಾರಕ್ಕಾಗಿ ಸ್ತ್ರೀಶಕ್ತಿ ಬ್ಯಾಂಕ್ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.
ಪುರುಷರಿಗೇ ಸೀಮಿತಗೊಂಡಿರುವ ಕ್ಷೇತ್ರ ಇಂದು ಯಾವುದೂ ಇಲ್ಲ. ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಪ್ರಾಬಲ್ಯ ಹೊಂದಿದ್ದಾರೆ. ಆದರೆ ಕೆಲಸದ ಸ್ಥಳ ಮತ್ತು ಶಾಲೆಗಳಲ್ಲಿ ದೈಹಿಕ ದೌರ್ಜನ್ಯಗಳಿಗೆ ತುತ್ತಾಗುತ್ತಿರುವುದು ವಿಪರ್ಯಾಸ. ಪರಿಚಯಸ್ಥರು ಮತ್ತು ಹತ್ತಿರದ ಸಂಬಂಧಿಗಳಿಂದಲೇ, ಅದರಲ್ಲೂ ಸುಶಿಕ್ಷಿತರಿಂದಲೇ ಇಂದು ಹೆಚ್ಚು ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿಷಾದಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಪರಿಣಾಮಕಾರಿಯಾಗಿ ಕಾನೂನು ರೂಪಿಸಲು ಸರಕಾರ ಪ್ರತ್ಯೇಕವಾದ ಸಮಿತಿಯನ್ನು ರಚಿಸಿದೆ ಎಂದು ಹೇಳಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಕೇವಲ ಕಾನೂನು ವ್ಯವಸ್ಥೆಯಿಂದ ತಡೆಯಲು ಅಸಾಧ್ಯ. ಸಮಾಜದಲ್ಲಿ ಮಹಿಳಾ ದೌರ್ಜನ್ಯದ ವಿರುದ್ಧ ಜಾಗೃತಿ ಮೂಡಿಸಬೇಕಿದೆ, ಈ ಕಾರ್ಯಕ್ರಮಕ್ಕೆ ಇಲಾಖೆ ಮತ್ತು ಸಂಘಸಂಸ್ಥೆಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸಾಮಾಜಿಕ ಪಿಡುಗುಗಳಾದ ಭ್ರೂಣ ಹತ್ಯೆ, ಬಾಲ್ಯವಿವಾಹ ಮತ್ತು ವರದಕ್ಷಿಣೆ ವಿರುದ್ಧ ಮಹಿಳೆಯರು ಧ್ವನಿಗೂಡಿಸಬೇಕು ಎಂದು ಹೇಳಿದ ಅವರು, ರಾಜ್ಯದಲ್ಲಿ ಈಗಾಗಲೇ ಪುರಸಭೆ ಮತ್ತು ಪಂಚಾಯತ್ ಮಟ್ಟದಲ್ಲಿ ಶೇ.50ರಷ್ಟು ಮಹಿಳೆಯರಿಗೆ ಮೀಸಲಾತಿಯನ್ನು ನೀಡಲಾಗಿದೆ. ಇದೇ ರೀತಿ ವಿಧಾನ ಸಭೆ ಮತ್ತು ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿಗಾಗಿ ಪ್ರಯ ತ್ನಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಸಚಿವೆ ಉಮಾಶ್ರೀ ಮಾತನಾಡಿ, ಅವನತಿಯತ್ತ ಮುಖಮಾಡಿದ್ದ ಸ್ತ್ರೀ ಶಕ್ತಿ ಸಂಘಗಳ ಅಭಿವೃದ್ಧಿಗಾಗಿ ತಲಾ ಐದು ಸಾವಿರದಂತೆ ಸುತ್ತು ನಿಧಿಯನ್ನು ಸರಕಾರ ಈಗಾಗಲೇ ಬಿಡುಗಡೆಗೊಳಿಸಿದೆ. ದೈಹಿಕ ದೌರ್ಜನ್ಯಗಳಿಗೆ ಒಳಗಾಗಿರುವ ಸಂತ್ರಸ್ತರಿಗೆ ಸ್ಥೈರ್ಯ ಯೋಜನೆಯಡಿ ತಲಾ 25 ಸಾವಿರ ರೂ. ನೀಡಲು ಐದು ಕೋಟಿ ರೂ.ಅನುದಾನವನ್ನು ಸರಕಾರ ನೀಡಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಮಾತನಾಡಿ, ರಾಜ್ಯದಲ್ಲಿ ಅತ್ಯಾಚಾರವೆಸುಗುತ್ತಿರುವ ಆರೋಪಿಗಳಲ್ಲಿ ಶೇ.97 ರಷ್ಟು ಮಂದಿ ಸಾಕ್ಷಿಗಳಿಲ್ಲದೆ ಶಿಕ್ಷೆಯನ್ನು ಅನುಭವಿಸದೇ ಬಿಡುಗಡೆಯಾಗುತ್ತಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಅತ್ಯಾಚಾರ ಹೆಚ್ಚಾಗಲು ಕಾರಣ. ಈ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಅತ್ಯಾಚಾರ ಸಂತ್ರಸ್ತೆ ಪರ ಸಾಕ್ಷಿ ಹೇಳಲು ಮುಂದೆ ಬಂದಾಗ ಮಾತ್ರ ಅತ್ಯಾಚಾರ ಪ್ರಮಾಣ ಕಡಿಮೆಯಾಗಲು ಸಾಧ್ಯ ಎಂದು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಇದೇ ವೇಳೆ ಮಹಿಳೆಯರ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಿರುವ ಸಂಘ ಸಂಸ್ಥೆಗಳಿಗೆ ಮತ್ತು ಸ್ತ್ರೀ ಶಕ್ತಿ ಸಂಘಟನೆಗಳಿಗೆ ಮತ್ತು ಒಕ್ಕೂಟಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ, ಮಾಜಿ ಸಚಿವೆ ರಾಣಿ ಸತೀಶ್, ವಿದಾನ ಪರಿಷತ್ ಸದಸ್ಯೆ ಮೋಟಮ್ಮ, ನಟಿ ಶೃತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.







